ಬೆಂಗಳೂರು: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಜಾರಿಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ 7 ಲಕ್ಷಕ್ಕೂ ಅಧಿಕ ಸರ್ಕಾರಿ ಹುದ್ದೆಗಳಿದ್ದು, 5 ಲಕ್ಷಕ್ಕೂ ಅಧಿಕ ಹುದ್ದೆಗಳು ಭರ್ತಿಯಾಗಿವೆ. ಎರಡೂವರೆ ಲಕ್ಷದಷ್ಟು ಹುದ್ದೆಗಳು ಖಾಲಿ ಇದ್ದು, ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಇಲ್ಲ. ಮೀಸಲಾತಿ ಇಲ್ಲದಿದ್ದರೆ ಸಾಮಾಜಿಕ ನ್ಯಾಯ ಇರುವುದಿಲ್ಲ. ಹೀಗಾಗಿ ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಮೀಸಲಾತಿ ಕಲ್ಪಿಸುವ ಚಿಂತನೆ ಇದೆ ಎಂದು ತಿಳಿಸಿದ್ದಾರೆ.
ಪ್ರಣಾಳಿಕೆಯಲ್ಲಿ ಖಾಲಿ ಹುದ್ದೆ ಭರ್ತಿ ಮಾಡುವುದಾಗಿ ಭರವಸೆ ನೀಡಿದ್ದೇವೆ. ಶಿಕ್ಷಣ, ಪೊಲೀಸ್, ಆರೋಗ್ಯ ಇಲಾಖೆಯಲ್ಲಿ ಹೆಚ್ಚಿನ ಹುದ್ದೆಗಳಿದ್ದು, ಹಂತ ಹಂತವಾಗಿ ಅವುಗಳನ್ನು ಭರ್ತಿ ಮಾಡಲಾಗುವುದು. ನೇಮಕಾತಿ ನಡೆಯುವವರೆಗೆ ಹೊರಗುತ್ತಿಗೆಯಲ್ಲಿ ಮೀಸಲಾತಿ ತರುವ ಚಿಂತನೆ ಇದೆ ಎಂದು ಸಿಎಂ ತಿಳಿಸಿದ್ದಾರೆ.