ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿನ ನೀರಿನ ಬಿಲ್ ಮತ್ತು ಆಸ್ತಿ ತೆರಿಗೆ ಬಾಕಿ ವಸೂಲಾತಿ ಜವಾಬ್ದಾರಿಯನ್ನು ಮಹಿಳಾ ಸ್ವಸಹಾಯ ಗುಂಪು, ಸರ್ಕಾರೇತರ ಸಂಸ್ಥೆ ಹಾಗೂ ಸ್ತ್ರೀಶಕ್ತಿ ಗುಂಪುಗಳಿಗೆ ವಹಿಸಿಕೊಡಲು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ನೀರಿನ ಬಿಲ್, ಆಸ್ತಿ ತೆರಿಗೆ ಬಾಕಿ ವಸೂಲಿ ಮೊತ್ತದಲ್ಲಿ ಶೇ. 5ರಷ್ಟು ಪ್ರೋತ್ಸಾಹ ಧನವಾಗಿ ನೀಡಲು ನಿರ್ಧರಿಸಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ರಾಜ್ಯದ 10 ಮಹಾನಗರ ಪಾಲಿಕೆ, 61 ನಗರ ಸಭೆ, 114 ಪಟ್ಟಣ ಪಂಚಾಯಿತಿ ಸೇರಿ ಎಲ್ಲ 315 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಾತಿಗೆ ಸ್ಥಳೀಯ ಮಹಿಳಾ ಸ್ವಸಹಾಯ ಗುಂಪುಗಳ ಸೇವೆ ಪಡೆಯಲು ನಿರ್ಧರಿಸಲಾಗಿದೆ. ವಸೂಲಿ ಮಾಡುವ ಮೊತ್ತದಲ್ಲಿ ಪ್ರೋತ್ಸಾಹ ಧನವಾಗಿ ಶೇ. 5ರಷ್ಟು ನೀಡಲಾಗುವುದು. ಸ್ಥಳೀಯ ಸಂಸ್ಥೆಗಳಲ್ಲಿ ಸುಮಾರು ಶೇಕಡ 40ರಷ್ಟು ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳನ್ನು ಉತ್ತೇಜಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.