ಬೆಂಗಳೂರು : 2023-24 ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಸೌಲಭ್ಯವನ್ನು ವಿದ್ಯಾರ್ಥಿಗಳಿಗೆ ಒದಗಿಸಲು ಕರ್ನಾಟಕ ರಾಜ್ಯ ಸರ್ಕಾರವು ಮಾರ್ಗಸೂಚಿಯನ್ನು ಹೊರಡಿಸಿದೆ.
ಮಾರ್ಗಸೂಚಿ ಅನ್ವಯ ಸಾಮಾನ್ಯ ವರ್ಗಕ್ಕೆ ಸೇರಿದ ಮತ್ತು ಇತರೆ ಯಾವುದೇ ಇಲಾಖೆಯ (ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಇತ್ಯಾದಿ) ಶಿಷ್ಯ ವೇತನವನ್ನು ಪಡೆಯದೇ ಇರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ (SSP)ಸಲ್ಲಿಸಬಹುದಾಗಿದೆ. ರೈತರು ಹಾಗೂ ಭೂರಹಿತ ಕೃಷಿ ಕಾರ್ಮಿಕರ ಕುಟುಂಬದ ವಾರ್ಷಿಕ ಆದಾಯ ರೂ.2.50,000/-(ಎರಡು ಲಕ್ಷದ ಐವತ್ತು ಸಾವಿರ ರೂಪಾಯಿಗಳು) ಮೀರದಿರುವ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ.
ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ (SSP) ವಿದ್ಯಾರ್ಥಿಗಳ ಲಾಗಿನ್ ನಲ್ಲಿ ತಮ್ಮ ಪ್ರಮಾಣಪತ್ರಗಳ ಸಮೇತ ಅರ್ಜಿ ಸಲ್ಲಿಸಲು ಫೆಬ್ರವರಿ 29,2024 ಕೊನೆಯ ದಿನವಾಗಿದೆ.
ಉಳಿದಂತೆ ಈ ಹಿಂದಿನ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ. ಅರ್ಹ ವಿದ್ಯಾರ್ಥಿಗಳು ಪ್ರಸ್ತುತ ವಿದ್ಯಾನಿಧಿ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.