ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೊಡ್ಡಬುಕ್ಕಸಾಗರದಲ್ಲಿ ಬಾಲ್ಯವಿವಾಹ ನಡೆದಿರುವುದು ಬೆಳಕಿಗೆ ಬಂದಿದೆ. 16 ವರ್ಷದ ಬಾಲಕಿ ಗರ್ಭಿಣಿಯಾಗಿದ್ದು, ಆಕೆಯನ್ನು ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಇರಿಸಲಾಗಿದೆ.
ಈಗಾಗಲೇ ಮದುವೆಯಾಗಿರುವ 34 ವರ್ಷದ ಬೆಂಗಳೂರು ಮೂಲದ ಯುವಕ ದೊಡ್ಡಬುಕ್ಕಸಾಗರ ಗ್ರಾಮದ 16 ವರ್ಷದ ಬಾಲಕಿಯನ್ನು ಮದುವೆಯಾಗಿದ್ದಾನೆ. ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿದ್ದಾಳೆ. ಆಕೆಯನ್ನು ಮದುವೆಯಾದ ಯುವಕನ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.
ಮಕ್ಕಳ ಸಹಾಯವಾಣಿಗೆ ಬಂದ ಮಾಹಿತಿ ಆಧರಿಸಿ ಅಂಗನವಾಡಿ ಮೇಲ್ವಿಚಾರಕಿ, ಗ್ರಾಪಂ ಪಿಡಿಒ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಮತ್ತು ಕಡೂರು ಪೊಲೀಸರು ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಬಾಲ್ಯವಿವಾಹ ನಡೆದಿರುವುದು ಗಮನಕ್ಕೆ ಬಂದಿದೆ. ಕಡೂರು ಠಾಣೆ ಪೊಲೀಸರು, ಬಾಲ್ಯವಿವಾಹ ನಿಷೇಧ, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.