ಚಿಕ್ಕಮಗಳೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಅರಣ್ಯ ಇಲಾಖೆ ಸಿಬ್ಬಂದಿಗಳ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನ್ನಪ್ಪಿದ್ದು, ಅರಣ್ಯ ಇಲಾಖೆ ನಿರ್ಲಕ್ಷವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮದ ಅರಣ್ಯ ಇಲಾಖೆ ಆವರಣದಲ್ಲಿ ವ್ಯಕ್ತಿಯ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಒಂದು ತಿಂಗಳಲ್ಲಿ ಕಾಡಾನೆ ದಾಳಿಗೆ ಇಬ್ಬರು ಸಾವನ್ನಪ್ಪಿದ್ದು, ಅರಣ್ಯ ಇಲಾಖೆ ಬೇಜವಾಬ್ದಾರಿ ಮೆರೆದಿದೆ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ ಕೆಲ ಪ್ರತಿಭಟನಾಕಾರರು ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಕಚೇರಿ ಗೇಟ್ ತೆಗೆದು ಒಳನುಗ್ಗಿದ್ದಾರೆ.
ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದ್ದಾರೆ. ಪೊಲೀಸರಿಗೂ ಬಗ್ಗದ ಪ್ರತಿಭಟನಾಕಾರರು ಸಂಘರ್ಷಕ್ಕೆ ಮುಂದಾಗಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ. ಲಾಠಿಚಾರ್ಜ್ ನಡೆಯುತ್ತಿದ್ದಂತೆ ಮತ್ತಷ್ಟು ಆಕ್ರೋಶಗೊಂಡಿರುವ ಪ್ರತಿಭಟನಾಕಾರರು ಪೊಲೀಸರ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಪೊಲೀಸರು ಹಾಗೂ ಗ್ರಾಮಸ್ಥರ ನಡುವೆ ಗಲಾಟೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಒಟ್ಟಾರೆ ಅರಣ್ಯ ಇಲಾಖೆ ಆವರಣ ರಣಾಂಗಣವಾಗಿದೆ.