
ಚಿಕ್ಕಮಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹುಲಿ, ಚಿರತೆ, ಆನೆ ದಾಳಿಗಳು ಮುಂದುವರೆದಿದ್ದು, ಜನರ ಜೀವವನ್ನೇ ಬಲಿ ಪಡೆಯುತ್ತಿವೆ. ಮೈಸೂರಿನಲ್ಲಿ ಹುಲಿ ದಾಳಿಗೆ ರೈತರೊಬ್ಬರು ಬಲಿಯಾಗಿರುವ ಘಟನೆ ಬೆನ್ನಲ್ಲೇ ಇದೀಗ ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಹೆಡದಾಳು ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿದ್ದು, ಕಾರ್ಮಿಕ ಮಹಿಳೆ ಆನೆದಾಳಿಗೆ ಮೃತಪಟ್ಟಿದ್ದರೆ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೀನಾ (45) ಮೃತರು.
ಬೆಳಿಗ್ಗೆ ತೋಟಕ್ಕೆ ತೆರಳುತ್ತಿದ್ದ ವೇಳೆ ಏಕಕಿ ಒಂಟಿಸಲಗ ದಾಳಿ ನಡೆಸಿದೆ. ಮಹಿಳೆ ಮೀನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆ ದಾಳಿಗೆ ಗ್ರಾಮಸ್ಥರು ಜೀವ ಕಳೆದುಕೊಳ್ಳುತ್ತಿದ್ದು, ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.