ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿದೆ.
ಹೆಲ್ಮೆಟ್ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳು ವಕೀಲ ಪ್ರೀತಂ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು. ಪ್ರಕರಣ ಸಂಬಂಧ ಚಿಕ್ಕಮಗಳೂರು ಠಾಣೆಯ ಪಿಎಸ್ ಐ ಸೇರಿ 6 ಸಿಬ್ಬಂದಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. 6 ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿತ್ತು.
ವಕೀಲನ ಮೇಲೆ ಹಲ್ಲೆ ಪ್ರಕರಣ ಖಂಡಿಸಿ ವಕೀಲರು ಪೊಲೀಸ್ ಠಾಣೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದರು. ವಕೀಲರು ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸರು ಹಾಗೂ ಅವರ ಕುಟುಂಬದವರು ಚಿಕ್ಕಮಗಳೂರು ನಗರದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ 15 ವಕೀಲರ ವಿರುದ್ಧ ಎಫ್ ಐ ಆರ್ ಕೂಡ ದಾಖಲಾಗಿತ್ತು.
ಇದೀಗ ವಕೀಲನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.