ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸ್ ಸಿಬ್ಬಂಧಿಗಳು ಹಲ್ಲೆ ನಡೆಸಿದ್ದ ಪ್ರಕರರಣ ಸಂಬಂಧ ಈಗಾಗಲೇ 6 ಪೊಲೀಸ್ ಸಿಬ್ಬಂದಿ ಮೇಲೆ ಎಫ್ ಐ ಆರ್ ದಾಖಲಾಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ.
ವಕೀಲನ ಮೇಲಿನ ಹಲ್ಲೆ ಖಂಡಿಸಿ ವಕೀಲರು ಚಿಕ್ಕಮಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದು, ಠಾಣೆಯಲ್ಲಿ ಪ್ರತಿಭಟನೆ ನಡೆಸಿರುವ ವಕೀಲರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ ಐ ಆರ್ ದಾಖಲಾಗಿದೆ.
ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದ ವೇಳೆ ವಕೀಲರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಲ್ಲೆ ಖಂಡಿಸಿ ಶನಿವಾರ ಮಧ್ಯರಾತ್ರಿವರೆಗೂ ಚಿಕ್ಕಮಗಳೂರಿನ ಹನುಮಂತಪ್ಪ ಸರ್ಕಲ್ ನಲ್ಲಿ ಪೊಲೀಸರು ಹಾಗೂ ಕುಟುಂಬದವರು ಪ್ರತಿಭಟನೆ ನಡೆಸಿದರು. ಹಲ್ಲೆ ನಡೆಸಿದವರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಆಗ್ರಹಿಸಿದರು.
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸುಧಾಕರ್, ವಕೀಲ ಪ್ರೀತಮ್ ಸೇರಿದಂತೆ 15 ವಕೀಲರ ವಿರುದ್ಧ ಸೆಕ್ಷನ್ 503, 406, 353, 149 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ.