ಬೆಂಗಳೂರು: ನಿಮ್ಹಾನ್ಸ್ ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಒಂದು ವರ್ಷದ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಗು ಸಾವಿಗೆ ಸ್ಪಷ್ಟನೆ ನೀಡಿದೆ.
ಮಗು ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ಚಿಂತಾಜನಕ ಸ್ಥಿತಿಯಲ್ಲಿತ್ತು. ಮಗುವಿನ ತಲೆಗೆ ಗಂಭೀರವಾಗಿ ಪೆಟ್ಟಾಗಿತ್ತು. ಮಗುವಿನ ಆರೋಗ್ಯದಲ್ಲಿಯೂ ಏರುಪೇರು ಕಂಡುಬಂದಿದೆ. ಬೆಡ್ ಇಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ಸಹ ತಿಳಿಸಿದ್ದು, ಬಳಿಕ ಮಧ್ಯಾಹ್ನ 3 ಗಂಟೆಗೆ ಮಗುವಿಗೆ ಹೃದಯಾಘತವಾಗಿದೆ. ವೈದ್ಯರು ಮಗುವನ್ನು ಬದುಕಿಸಲು ಸಾಕಷ್ಟು ಪ್ರಯತ್ನಿಸಿದ್ದಾರೆ. ಆದರೆ ಸಂಜೆ 4 ಗಂಟೆ 5 ನಿಮಿಷಕ್ಕೆ ಮಗು ಮೃತಪಟ್ಟಿದೆ ಎಂದು ನಿಮ್ಹಾನ್ಸ್ ಆಸ್ಪತ್ರೆ ತಿಳಿಸಿದೆ.
ನ.29ರಂದು ಮಧ್ಯಾಹ್ನ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಒಂದು ವರ್ಷದ ಮಗುವನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಮಗುವಿನ ಸ್ಥಿತಿ ಗಂಭೀರವಾಗಿದ್ದರೂ ಸೂಕ್ತ ಸಮಯದಲ್ಲಿ ಮಗುವಿಗೆ ಚಿಕಿತ್ಸೆ ಸಿಗದ ಕಾರಣ ಮಗು ಸಾವನ್ನಪ್ಪಿತ್ತು. ನಿಮ್ಹಾನ್ಸ್ ನಿರ್ಲಕ್ಷ್ಯಕ್ಕೆ ಮಗು ಸಾವನ್ನಪ್ಪಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ಮಗು ಸಾವಿನ ಬಗ್ಗೆ ಸ್ಪಷ್ಟನೆ ನೀಡಿದೆ.