ಬೆಂಗಳೂರು: ಅಪ್ರಾಪ್ತ ಮಕ್ಕಳಿಗೆ ಕಾಂಡೊಮ್ ಮತ್ತು ಗರ್ಭ ನಿರೋಧಕ ಮಾತ್ರೆ ಬಗ್ಗೆ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಔಷಧ ನಿಯಂತ್ರಣ ಇಲಾಖೆಯಿಂದ ಜಿಲ್ಲಾಮಟ್ಟದ ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಅಂಗಡಿಗಳ ಎದುರಲ್ಲಿ ಅಪ್ರಾಪ್ತ ಮಕ್ಕಳಿಗೆ ಕಾಂಡೊಮ್ ಮತ್ತು ಗರ್ಭ ನಿರೋಧಕ ಮಾತ್ರೆಗಳನ್ನು ಮಾರಾಟ ಮಾಡುವುದಿಲ್ಲ. ಇಂತಹ ಔಷಧಿ ಉಪಯೋಗಿಸಬಾರದು ಎಂದು ಪೋಸ್ಟರ್ ಹಾಕಲು ಕ್ರಮ ಕೈಗೊಳ್ಳಲಾಗಿದೆ.
ಇತ್ತೀಚೆಗೆ ಶಾಲಾ ಮಕ್ಕಳ ಬ್ಯಾಗ್ ಗಳಲ್ಲಿ ಕಾಂಡೊಮ್ ಮತ್ತು ಗರ್ಭ ನಿರೋಧಕ ಮಾತ್ರೆ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಅಗತ್ಯ ಕ್ರಮ ಕೈಗೊಳ್ಳಲು ಔಷಧ ನಿಯಂತ್ರಣ ಇಲಾಖೆಗೆ ತಿಳಿಸಿದ್ದು, ಈ ಹಿನ್ನಲೆಯಲ್ಲಿ ಸುತ್ತೋಲೆ ಹೊರಡಿಸಲಾಗಿದೆ.
ಪೋಸ್ಟರ್ ಗಳನ್ನು ಪ್ರದರ್ಶಿಸಿ ಮಕ್ಕಳಿಗೆ ತಿಳಿವಳಿಕೆ ನೀಡಬೇಕು. ಇಂತಹ ವಸ್ತುಗಳನ್ನು ಔಷಧ ಅಂಗಡಿಗಳಲ್ಲಿ ಮಕ್ಕಳಿಗೆ ಮಾರಾಟ ಮಾಡುವುದು ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಬೇಕು. ಕಾಂಡೊಮ್ ಮತ್ತು ಗರ್ಭ ನಿರೋಧಕ ಮಾತ್ರೆಗಳ ಮಾರಾಟ ಬ್ಯಾನ್ ಮಾಡಿಲ್ಲ. ಅವುಗಳನ್ನು ಅಪ್ರಾಪ್ತರು ಬಳಸಬಾರದು ಎಂದು ಜಾಗೃತಿ ಮೂಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.