ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ 14 ಮಕ್ಕಳು ಅಸ್ವಸ್ಥರಾಗಿದ್ದು, ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕಳುಹಿಸಲಾಗಿದೆ.
ಜ್ವರ ಸೇರಿದಂತೆ ವಿವಿಧ ಕಾರಣಗಳಿಂದ ಒಳರೋಗಿಗಳಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಕ್ಕಳಿಗೆ ಆಂಟಿಬಯೋಟಿಕ್ ಇಂಜಿಕ್ಷನ್ ನೀಡಲಾಗಿತ್ತು. ಹೀಗೆ ಇಂಜೆಕ್ಷನ್ ಪಡೆದುಕೊಂಡ 14 ಮಕ್ಕಳಿಗೆ ತೀವ್ರವಾದ ಚಳಿ ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ ಎಂದು ಪೋಷಕರು ತಿಳಿಸಿದ್ದಾರೆ. ಮಕ್ಕಳ ಜೀವಕ್ಕೆ ಯಾವುದೇ ಅಪಾಯವಿಲ್ಲ, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಾ. ಪ್ರಕಾಶ ಬೋಸ್ಲೆ ಹೇಳಿದ್ದಾರೆ.
ಮಾಹಿತಿ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಹೆಚ್. ಹಾಲಪ್ಪ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳು ಇಂಜೆಕ್ಷನ್ ಕೊಟ್ಟ ನಂತರ ಅಸ್ವಸ್ಥರಾಗಿರುವುದಾಗಿ ಪೋಷಕರು ತಿಳಿಸಿದ್ದರು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ತೆರಳಲು ಕೆಲವು ಮಕ್ಕಳಿಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಸಾಗರ ಆಸ್ಪತ್ರೆಯಲ್ಲಿರುವ ಮಕ್ಕಳ ಬಗ್ಗೆ ನಿಗಾವಹಿಸಲು ತಿಳಿಸಲಾಗಿದೆ ಎಂದರು.