ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ಚಿತ್ರೋದ್ಯಮ ಕೂಡ ಬೆಂಬಲ ನೀಡಿದೆ.
ನಾಳೆ ಬಂದ್ ಗೆ ಕರೆ ನೀಡಿರುವ ಹಿನ್ನೆಲೆ ರಾಜ್ಯಾದ್ಯಂತ ಚಿತ್ರಪ್ರದರ್ಶನ ಸ್ಥಗಿತಗೊಳ್ಳಲಿದೆ. ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ರಾಜ್ಯಾದ್ಯಂತ ಯಾವುದೇ ಸಿನಿಮಾ ಪ್ರದರ್ಶನ ಇರುವುದಿಲ್ಲ, ಸಿನಿಪ್ರಿಯರು ಇದಕ್ಕೆ ಬೆಂಬಲ ನೀಡಿ ಎಂದು ಪ್ರದರ್ಶಕ ವಲಯ ಸಂಘದ ಅಧ್ಯಕ್ಷ ಕೆವಿ ಚಂದ್ರಶೇಖರ್ ಹೇಳಿದ್ದಾರೆ.
ಕರ್ನಾಟಕ ಬಂದ್ ಗೆ ಸ್ಯಾಂಡಲ್ ವುಡ್ ಕೂಡ ಬೆಂಬಲ ನೀಡಿದ್ದು, ನಾಳೆ ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.ನಾಳೆಯ ಅಖಂಡ ಕರ್ನಾಟಕ ಬಂದ್ ಗೆ ಫಿಲ್ಮ್ ಚೇಂಬರ್ ಬೆಂಬಲ ಸೂಚಿಸಿದ್ದು, ಕರ್ನಾಟಕ ಬಂದ್ ಪ್ರತಿಭಟನೆಯಲ್ಲಿ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ನಟ, ನಟಿಯರು ಭಾಗಿಯಾಗುವಂತೆ ಆಹ್ವಾನ ನೀಡಲಾಗಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ಎಂ ಸುರೇಶ್ ಹೇಳಿದ್ದಾರೆ.
ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿಯಾಗಲಿದೆ , ಒಂದು ವೇಳೆ ಬಲವಂತವಾಗಿ ಬಂದ್ ಮಾಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.