
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ಸಿಬಿಎಸ್ಇ 10 ನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿದ್ದು, 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಅನೇಕ ರಾಜ್ಯಗಳಲ್ಲಿ 10ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದು, ಕೆಲವು ರಾಜ್ಯಗಳಲ್ಲಿ ಮುಂದೂಡಲಾಗಿದೆ. ಅದೇ ರೀತಿ ನೀಟ್ -ಪಿಜಿ ಪ್ರವೇಶ ಪರೀಕ್ಷೆಯನ್ನು ಕೂಡ ಮುಂದೂಡಲಾಗಿದೆ. ಈಗ ICSE ಪರೀಕ್ಷೆಯನ್ನು ಮುಂದೂಡಲಾಗಿದೆ.
12 ನೇ ತರಗತಿಗೆ ಬೋರ್ಡ್ ಪರೀಕ್ಷೆಗಳನ್ನು ಮುಂದೂಡುವುದಾಗಿ ಸಿಐಎಸ್‌ಸಿಇ ಘೋಷಿಸಿದ್ದು, 10 ನೇ ತರಗತಿ ಬೋರ್ಡ್ ಪರೀಕ್ಷೆಗಳಿಗೆ ಲಿಖಿತ ಪರೀಕ್ಷೆಯನ್ನು ಐಚ್ಛಿಕಗೊಳಿಸಿದೆ. ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಜೂನ್ 1 ರಂದು ಬೋರ್ಡ್ ಪರೀಕ್ಷೆಗಳ ದಿನಾಂಕಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.
ಸಿಬಿಎಸ್‌ಇಗಿಂತ ಭಿನ್ನವಾಗಿ ಸಿಐಎಸ್‌ಸಿಇ ವಿದ್ಯಾರ್ಥಿಗಳಿಗೆ 10 ನೇ ತರಗತಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗಿದೆ. ಸಿಬಿಎಸ್‌ಇ ಪರೀಕ್ಷೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಿ ಹೊಸ ಯೋಜನೆಯ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಲು ನಿರ್ಧರಿಸಿದೆ.