ಜೈಪುರ್: ಸಾಮಾನ್ಯ ಜನರಿಗೂ ಅರ್ಥವಾಗುವ ರೀತಿಯಲ್ಲಿ ಸರಳವಾದ ಭಾಷೆಯಲ್ಲಿ ತೀರ್ಪು ಬರೆಯುವಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನ್ಯಾಯಾಧೀಶರಿಗೆ ಕಿವಿಮಾತು ಹೇಳಿದ್ದಾರೆ.
ರಾಜಸ್ಥಾನದ ಬಿಕಾನೇರ್ ನಲ್ಲಿ ಶನಿವಾರ ನಡೆದ ನಮ್ಮ ಸಂವಿಧಾನ ನಮ್ಮ ಗೌರವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಜೆಐ ಡಿ.ವೈ. ಚಂದ್ರಚೂಡ್ ಅವರು, ನ್ಯಾಯಾಲಯದ ತೀರ್ಪುಗಳು ಪ್ರಾದೇಶಿಕ ಭಾಷೆಯಲ್ಲಿಯೂ ಲಭ್ಯವಾಗಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಕ್ರಮ ಕೈಗೊಂಡಿದೆ. ಇದರಿಂದಾಗಿ ಅದೆಷ್ಟೋ ತೀರ್ಪುಗಳು ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯವಿದೆ. ಆದರೆ ಸಂಕೀರ್ಣತೆಯಿಂದ ಕೂಡಿದ ಕಾನೂನು ಭಾಷೆ ಎಲ್ಲರಿಗೂ ಅರ್ಥವಾಗುವುದಿಲ್ಲ. ಜನಸಾಮಾನ್ಯರಿಗೂ ಅರ್ಥವಾಗುವ ರೀತಿಯಲ್ಲಿ ಸರಳವಾದ ಭಾಷೆಯಲ್ಲಿ ಜಡ್ಜ್ ಗಳು ತೀರ್ಪು ಬರೆಯಬೇಕು ಎಂದು ಹೇಳಿದ್ದಾರೆ.
ದೇಶದ ಏಕತೆ ಮತ್ತು ಪ್ರಗತಿಯಲ್ಲಿ ಸಂವಿಧಾನದ ಪಾತ್ರ ಮಹತ್ವದ್ದು. ನಾಗರೀಕರ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಕೈಗೊಂಡ ನಮ್ಮ ಸಂವಿಧಾನ ನಮ್ಮ ಗೌರವ ಅಭಿಯಾನ ಪೂರಕವಾಗಿದೆ ಎಂದು ಹೇಳಿದ್ದಾರೆ.