ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಹವಮಾನ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಮಕ್ಕಳು ಮತ್ತು ವೃದ್ದರಲ್ಲಿ ವೈರಲ್ ಜ್ವರ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ.
ಹವಾಮಾನದಲ್ಲಿನ ಹಠಾತ್ ಬದಲಾವಣೆಯಿಂದಾಗಿ ವೈರಲ್ ಜ್ವರ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ. ಮಳೆ, ತಂಪಾದ ಗಾಳಿ ವಾತಾವರಣದ ಪರಿಣಾಮ ವಿಶೇಷವಾಗಿ ಮಕ್ಕಳು ಮತ್ತು ವೃದ್ಧರ ಮೇಲೆ ಪರಿಣಾಮ ಬೀರುತ್ತಿದೆ. ಆಸ್ಪತ್ರೆಗಳಿಗೆ ಬರುವ ರೋಗಿಗಳ ಸಂಖ್ಯೆ ಸ್ಥಿರವಾಗಿ ಹೆಚ್ಚುತ್ತಿದೆ.
ಕೆಲವರು ಶೀತದಿಂದ ಬಳಲುತ್ತಿದ್ದಾರೆ ಮತ್ತು ಇನ್ನೂ ಕೆಲವರು ಜ್ವರದಿಂದ ಬಳಲುತ್ತಿದ್ದಾರೆ. ಕೆಲವರು ಚಿಕಿತ್ಸೆಗಾಗಿ ವೈದ್ಯರ ಬಳಿಗೆ ಹೋಗುತ್ತಿದ್ದಾರೆ, ಕೆಲವು ರೋಗಿಗಳು ಮನೆಯಲ್ಲಿ ತಯಾರಿಸಿದ ಔಷಧಿಗಳನ್ನು ಪ್ರಯತ್ನಿಸುತ್ತಿದ್ದಾರೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ವೈರಲ್ ಜ್ವರದಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಾಗಿ ಕಂಡುಬರುತ್ತಿದೆ.