ಬೆಂಗಳೂರು: ಉಪಸಭಾಪತಿ ಆನಂದ ಮಾಮನಿ(56) ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ತಡರಾತ್ರಿ ನಿಧನರಾಗಿದ್ದಾರೆ.
ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂತಿಮ ದರ್ಶನ ಪಡೆದಿದ್ದಾರೆ.
ಭೇಟಿ ಬಳಿಕ ಮಾತನಾಡಿದ ಸಿಎಂ, ಆನಂದ ಮಾಮನಿ ಕ್ರಿಯಾಶೀಲ ರಾಜಕಾರಣಿಯಾಗಿದ್ದರು. ಎಲ್ಲದಕ್ಕಿಂತ ಹೆಚ್ಚಾಗಿ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ಇತ್ತೀಚೆಗಷ್ಟೇ ಉಮೇಶ್ ಕತ್ತಿ ಅವರನ್ನು ಕಳೆದುಕೊಂಡಿದ್ದೇವೆ. ಈಗ ಮತ್ತೆ ಬೆಳಗಾವಿ ಜಿಲ್ಲೆಯ ಮತ್ತೊಬ್ಬರನ್ನು ಕಳೆದುಕೊಂಡಿದ್ದೇವೆ ಎಂದರು.
ಆನಂದ ಮಾಮನಿ ಬಹಳ ಸಣ್ಣ ವಯಸ್ಸಿನಲ್ಲಿ ರಾಜಕಾರಣಕ್ಕೆ ಬಂದವರು. ಮಾದರಿ ಶಾಸಕರಾಗಿ ಕಾರ್ಯನಿರ್ವಹಿಸಿದ್ದರು. ನೀರಾವರಿ, ರಸ್ತೆ, ಶಾಲಾ ಕಟ್ಟಡಗಳು ಸೇರಿದಂತೆ ತಮ್ಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದರು. ಕ್ಷೇತ್ರವನ್ನು ಪ್ರೀತಿಸುತ್ತಿದ್ದರು. ಕ್ಷೇತ್ರದ ಜನರು ಕೂಡ ಅವರನ್ನು ಅಷ್ಟೇ ಪ್ರೀತಿ ಮಾಡಿದ್ದರು. ಆನಂದ ಮಾಮನಿ ಮತ್ತು ನಮ್ಮ ನಡುವೆ ಉತ್ತಮ ಒಡನಾಟವಿತ್ತು. ಇಷ್ಟು ಬೇಗ ನಮ್ಮನ್ನು ಬಿಟ್ಟು ಹೋಗುತ್ತಾರೆ ಎಂದುಕೊಂಡಿರಲಿಲ್ಲ. ಸವದತ್ತಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಸಂಜೆ 4 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಮಣಿಪಾಲ್ ಆಸ್ಪತ್ರೆಯ ಬಳಿ ಮುಖ್ಯಮಂತ್ರಿಗಳು ಹೇಳಿದ್ದಾರೆ.