ನವದೆಹಲಿ: ಅಭಿವೃದ್ಧಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ, ರಾಜ್ಯಸಚಿವ ಸಂಪುಟ ಪುನಾರಚನೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ದೆಹಲಿ ಪ್ರವಾಸ ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಕಾರ್ಯಕಾರಿಣಿ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಸಚಿವ ಸಂಪುಟ ಪುನಾರಚನೆಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ವರಿಷ್ಠರು ಕೂಡ ಎಲ್ಲ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಭೇಟಿ ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ.
ಅಮಿತ್ ಶಾ ಮತ್ತು ಬಿ.ಎಲ್. ಸಂತೋಷ್ ಅವರೊಂದಿಗೆ ಚರ್ಚೆ ಮಾಡಬೇಕು. ನಂತರ ಸಚಿವ ಸಂಪುಟದ ಪುನರಚನೆ ಬಗ್ಗೆ ನಿರ್ಧಾರ ಮಾಡಲಾಗುವುದು. ದೆಹಲಿ ಭೇಟಿ ಫಲಪ್ರದವಾಗಿದೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಇದರೊಂದಿಗೆ ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯುವುದಿಲ್ಲ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೆಡ್ ಸಿಗ್ನಲ್ ನೊಂದಿಗೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.