ದಾವಣಗೆರೆ: ರಾಜ್ಯದಲ್ಲಿ ಒಂದನೇ ತರಗತಿ ಆರಂಭಿಸುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡು ದಿನದಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕಡದಕಟ್ಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಇಲ್ಲವೇ ಸೋಮವಾರ ತಜ್ಞರೊಂದಿಗೆ ಚರ್ಚೆ ನಡೆಸಿ ಕೊರೋನಾ ನಿಯಂತ್ರಣ ಮಾರ್ಗಸೂಚಿ ಮತ್ತು ನಿಯಮಾವಳಿಗಳನ್ನು ಸರಳಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಇದರೊಂದಿಗೆ ರಾಜ್ಯದಲ್ಲಿ ಒಂದನೇ ತರಗತಿ ಆರಂಭಿಸುವ ಕುರಿತು ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.
ಅನೇಕ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಿದೆ. ಪಾಸಿಟಿವಿಟಿ ದರ ಶೇಕಡ 1 ಕ್ಕಿಂತಲೂ ಕಡಿಮೆ ಇದೆ. ಮುಂಜಾಗ್ರತೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ತಜ್ಞರು ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.