ಬೆಂಗಳೂರು: ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚಿನ ಸೌಲಭ್ಯ ಕಲ್ಪಿಸಲು 250 ಕೋಟಿ ರೂ. ಮಂಜೂರು ಮಾಡಲಾಗುವುದು. ನಾರಾಯಣ ಗುರುಗಳ ಹೆಸರಿನಲ್ಲಿ ತಲಾ 30 ಕೋಟಿ ರೂ ವೆಚ್ಚದ ನಾಲ್ಕು ಶಾಲೆಗಳನ್ನು ಆರಂಭಿಸಲಾಗುವುದು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವಟ್ ಹಾಲ್ ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಡಿ. ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿ ವೇತನದಲ್ಲಿ ತಲಾ 150 ರೂಪಾಯಿ ಹೆಚ್ಚಳ ಮಾಡಲಾಗಿದೆ. ರಾಜ್ಯದ 2439 ಹಾಸ್ಟೆಲ್ ಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು.
ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ವೇತನಕ್ಕೆ ಹೆಚ್ಚುವರಿಗಾಗಿ 10 ಕೋಟಿ ರೂಪಾಯಿ ಒದಗಿಸಲಾಗಿದೆ. ಹಿಂದುಳಿದ ವರ್ಗಗಳ ವಿವಿಧ ನಿಗಮ ಮಂಡಳಿಗಳಿಗೆ ಹೆಚ್ಚುವರಿಗಾಗಿ 800 ಕೋಟಿ ನೀಡಲಾಗಿದೆ. ಕನಕದಾಸರ ಹೆಸರಿನಲ್ಲಿ 50 ಹೊಸ ಹಾಸ್ಟೆಲ್ ನಿರ್ಮಿಸಲಾಗುತ್ತಿದೆ. ಐದು ಶೈಕ್ಷಣಿಕ ಕೇಂದ್ರಗಳಲ್ಲಿ ಒಂದು ಸಾವಿರ ಮಕ್ಕಳಿಗೆ ಬಹು ಮಹಡಿ ವಸತಿ ಸಮುಚ್ಚಯ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.