ನವದೆಹಲಿ: ಡಾ. ಕಸ್ತೂರಿ ರಂಗನ್ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಈಗಿರುವ ಅರಣ್ಯ ಕಾನೂನಿನಿಂದಲೇ ಪರಿಸರ ರಕ್ಷಣೆಯಾಗುತ್ತಿದೆ. ಗುಜರಾತ್, ಮಹಾರಾಷ್ಟ್ರ, ಕೇರಳ, ತಮಿಳುನಾಡು ಕೇಂದ್ರವನ್ನು ಭೇಟಿಯಾಗಿವೆ. ಕೇಂದ್ರ ಸರ್ಕಾರಕ್ಕೆ ವಿವಿಧ ರಾಜ್ಯ ಸರ್ಕಾರಗಳು ಈ ಬಗ್ಗೆ ಮನವಿ ಮಾಡಿವೆ. ಪಶ್ಚಿಮ ಘಟ್ಟ ಸಾಲಿನಲ್ಲಿ ಬರುವ ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಟ್ಟಿವೆ ಎಂದರು.
ಕಸ್ತೂರಿ ರಂಗನ್ ವರದಿ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ರಾಜ್ಯಗಳಿಂದ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ಕೊಡಲಾಗಿದ್ದು, ಜನಜೀವನ, ಪರಿಸರ ಸಂರಕ್ಷಣೆಯ ಮೇಲೆ ಆಗುವ ಪರಿಣಾಮಗಳ ಬಗ್ಗೆ ತಿಳಿಸಲಾಗಿದೆ. ಗ್ರೌಂಡ್ ಲೆವೆಲ್ ಸರ್ವೇ ಮಾಡದಿದ್ದರೆ ವಾಸ್ತವಾಂಶ ಗೊತ್ತಾಗುವುದಿಲ್ಲ. ಹೀಗಾಗಿ ಮತ್ತೊಮ್ಮೆ ಪರಿಶೀಲನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಸದ್ಯಕ್ಕೆ ರಾಜ್ಯದಲ್ಲಿ ಕಸ್ತೂರಿರಂಗನ್ ವರದಿ ಜಾರಿಯಾಗುವುದಿಲ್ಲ ಎಂದು ಸಿಎಂ ತಿಳಿಸಿದ್ದಾರೆ.