ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಭೇಟಿಯ ಸಂದರ್ಭದಲ್ಲಿ ರಾಜ್ಯದ ಅಭಿವೃದ್ಧಿ ಯೋಜನೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.
ಅಭಿವೃದ್ಧಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರ ಭೇಟಿಗೆ ಮಾತ್ರ ಬಂದಿದ್ದೇನೆ. ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಅಲ್ಲವೆಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಸಿಎಂ ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದು, ನಂತರ ಸಂಪುಟ ವಿಸ್ತರಣೆಯ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಹೇಳಲಾಗಿದೆ.
ಸಂಪುಟ ವಿಸ್ತರಣೆ ಇಲ್ಲವೇ, ಪುನಾರಚನೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಂದು ಮಹತ್ವದ ಬೆಳವಣಿಗೆ ನಡೆಯಲಿದ್ದು, ಆಕಾಂಕ್ಷಿಗಳ ದಂಡೇ ದೆಹಲಿಗೆ ದೌಡಾಯಿಸಿದೆ. ಹಲವು ಶಾಸಕರು, ನಾಯಕರು ದೆಹಲಿಗೆ ಆಗಮಿಸಿದ್ದು, ಸಂಪುಟ ಸೇರಲು ಲಾಬಿ ನಡೆಸಿದ್ದಾರೆ. ಸಿಎಂ ವರಿಷ್ಠರ ಭೇಟಿ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎನ್ನಲಾಗಿದೆ.