ಬೆಂಗಳೂರು: ವಿವೇಕ ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯಕ್ರಮದಡಿ ರಾಜ್ಯಾದ್ಯಂತ 7601 ಶಾಲಾ ಹಾಗೂ ಪದವಿ ಪೂರ್ವ ಕಾಲೇಜುಗಳ ಕೊಠಡಿಗಳ ನಿರ್ಮಾಣಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಕಲಬುರ್ಗಿ ತಾಲೂಕು ಮಡಿಯಾಳ ತಾಂಡಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸಿಎಂ ಶಂಕುಸ್ಥಾಪನೆ ನೆರವೇರಿಸಲಿದ್ದು, ರಾಜ್ಯದ ಇತರೆ ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ರಾಜ್ಯದಾದ್ಯಂತ 7,601 ಶಾಲಾ ಹಾಗೂ ಪಿಯು ಕಾಲೇಜುಗಳ ಕೊಠಡಿಗಳನ್ನು ನಿರ್ಮಿಸಲಾಗುವುದು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಓದಿದ ಶಾಲೆಗಳು ಮತ್ತು ಶತಮಾನ ಪೂರೈಸಿದ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಪಡಿಸಲಾಗುವುದು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿನೆನಪಿಗಾಗಿ 750 ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಶಾಲೆ ಹಾಗೂ ಪಿಯು ಕಾಲೇಜುಗಳ ತುರ್ತು ಕೊಠಡಿ ದುರಸ್ತಿ ಕಾಮಗಾರಿಗೆ 46.50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಮತ್ತು ದುರಸ್ತಿಗೆ 250 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಅದೇ ರೀತಿ ಪೀಠೋಪಕರಣಗಳನ್ನು ಸರಬರಾಜು ಮಾಡಲು 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.