
ಬೆಂಗಳೂರು: ವಿದೇಶಗಳಲ್ಲಿ ಹೊಸ ತಳಿಯ ಒಮಿಕ್ರೋನ್ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರದಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ರಾಜ್ಯದಲ್ಲಿಯೂ ಮಹತ್ವದ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಹೊಸ ವೈರಸ್ ತಡೆಯುವ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ.
ತಜ್ಞರು ಸಿಎಂಗೆ ಮಾಹಿತಿ ನೀಡಿದ್ದು, ಆಫ್ರಿಕಾ, ಸಿಂಗಾಪುರ ಸೇರಿ ಕೆಲವು ದೇಶಗಳಲ್ಲಿ ಕಂಡು ಬಂದ ಕೊರೋನಾ ಹೊಸ ತಳಿಯ ಬಗ್ಗೆ, WHO ಅಧ್ಯಯನ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣ ಕ್ರಮದ ಬಗ್ಗೆ ಸಭೆಯಲ್ಲಿ ಮುಖ್ಯಮಂತ್ರಿಗೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೋಂಕು ಹೆಚ್ಚಾಗುತ್ತಿರುವ ಪ್ರದೇಶಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಅಲ್ಲದೆ, ನೆರೆಯ ಕೇರಳ ರಾಜ್ಯದಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗಡಿಜಿಲ್ಲೆಗಳಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು. ಟೆಸ್ಟ್ ಹೆಚ್ಚಳ ಮಾಡಬೇಕೆಂದು ಸಲಹೆ ಕೇಳಿ ಬಂದಿದೆ. ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯ ಪರೀಕ್ಷೆ, ಪಾಸಿಟಿವ್ ಬಂದವರಿಗೆ ಕಡ್ಡಾಯ ಕ್ವಾರಂಟೈನ್, ಸೇರಿ ಹಲವು ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದಾರೆ.