ಬೆಂಗಳೂರು: ಗ್ರಾಮೀಣ ಭಾಗದ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದಾರೆ. ಹಳ್ಳಿಗಳಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿದೆ. ಕೃಷಿ ಚಟುವಟಿಕೆಗಳಿಗೂ ವಿದ್ಯುತ್ ಪೂರೈಕೆ ಸಮರ್ಪಕವಾಗಿಲ್ಲ ಎಂಬ ದೂರುಗಳಿವೆ. ಸಮಸ್ಯೆ ನಿವಾರಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಿಎಂ ಆದ ನಂತರ ಮೊದಲ ಸಲ ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳಿಗೆ 7 ಗಂಟೆ ಸಮರ್ಪಕ ವಿದ್ಯುತ್ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. 15 ಜಿಲ್ಲೆಗಳಲ್ಲಿ ಮಾತ್ರ 7 ಗಂಟೆ ವಿದ್ಯುತ್ ಪೂರೈಕೆಯಾಗುತ್ತಿದೆ. ಉಳಿದ ಜಿಲ್ಲೆಗಳಲ್ಲಿ ವಿದ್ಯುತ್ ಪೂರೈಕೆ ಸರಿಯಾಗಿಲ್ಲ. ಸರಿಯಾಗಿ 5 ಗಂಟೆ ಕೂಡ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಇದನ್ನು ಸರಿಪಡಿಸಿ ಕಾಲಮಿತಿಯೊಳಗೆ ಯೋಜನಾಬದ್ಧವಾಗಿ ಗ್ರಾಮೀಣ ಭಾಗಕ್ಕೆ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ವಿದ್ಯುತ್ ಸೋರಿಕೆ ತಡೆಗಟ್ಟಬೇಕು. ವಿದ್ಯುತ್ ಕ್ಷೇತ್ರದಲ್ಲಿ ಸ್ವಾವಲಂಬನೆ ಮತ್ತು ಸಮರ್ಪಕ ವಿದ್ಯುತ್ ನಿರ್ವಹಣೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಿಎಂ ತಿಳಿಸಿದ್ದಾರೆ. ಇಂಧನ ಸಚಿವ ಸುನಿಲ್ ಕುಮಾರ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್. ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಕುಮಾರ್ ನಾಯಕ್, ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕಿ ಡಾ. ಎನ್. ಮಂಜುಳಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.