ಚಂಡೀಗಢ: ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಹರಿಯಾಣ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಡಯಾಲಿಸಿಸ್ ಸೇವೆ ಒದಗಿಸಲಾಗುವುದು ಎಂದು ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ ಘೋಷಿಸಿದ್ದಾರೆ.
ಸತತ ಎರಡನೇ ಬಾರಿಗೆ ಹರಿಯಾಣ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೂತನ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಉಚಿತ ಡಯಾಲಿಸಿಸ್ ಭರವಸೆ ಈಡೇರಿಸಲಾಗಿದೆ ಎಂದು ತಿಳಿಸಿದ್ದಾರೆ.
ಮೂತ್ರಪಿಂಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿತ್ತು. ಇದಕ್ಕೆ ಸಂಬಂಧಿಸಿದ ಕಡತಕ್ಕೆ ಸಹಿ ಮಾಡಲಾಗಿದೆ. ಇನ್ನು ಮುಂದೆ ಕಿಡ್ನಿ ಡಯಾಲಿಸಿಸ್ ಗೆ ಒಳಗಾಗುವ ರೋಗಿಗಳ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ದೀರ್ಘಕಾಲದ ಮೂತ್ರಪಿಂಡ ರೋಗಿಗಳಿಗೆ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡಲಾಗುವುದು. ಮುಂದೆ ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಉಚಿತ ಡಯಾಲಿಸಿಸ್ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಘೋಷಿಸಿದ್ದಾರೆ.