ಬೆಂಗಳೂರು: ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಯಾರಿ ಆರಂಭಿಸಿದ್ದು, ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.
ಫೆಬ್ರವರಿ 16ರಂದು ಮುಖ್ಯಮಂತ್ರಿಗಳು 15ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ವಿವಿಧ ಇಲಾಖೆಗಳ ಜೊತೆ ಸಭೆ ನಡೆಸಲಿದ್ದಾರೆ. ಇಂದು 10ಕ್ಕೂ ಹೆಚ್ಚು ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ, ಬೆಂಗಳೂರು ಅಭಿವೃದ್ಧಿ, ಉನ್ನತ ಶಿಕ್ಷಣ ಇಲಾಖೆ, ಜಲಸಂಪನ್ಮೂಲ ಇಲಾಖೆ, ಸಣ್ಣ ನೀರಾವರಿ, ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಮತ್ತು ಜೀವಶಾಸ್ತ್ರ, ಅರಣ್ಯ ಇಲಾಖೆ, ಆಹಾರ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳ ಜೊತೆಗೆ ಸಿಎಂ ಸಭೆ ನಡೆಸಲಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಪೂರ್ವಭಾವಿ ಸಭೆ ನಡೆಸಲಾಗುವುದು. ಇಲಾಖಾವಾರು ಅನುದಾನ, ಯೋಜನೆ ಮೊದಲಾದ ವಿಷಯಗಳ ಬಗ್ಗೆ ಬಜೆಟ್ ಪೂರ್ವಭಾವಿಯಾಗಿ ಸಮಾಲೋಚನೆ ನಡೆಸಲಾಗುವುದು.