ಬೆಂಗಳೂರು: ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಟ್ರೋಲ್ ಮಾಡುವವರಿಗೆ, ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತಾಗಿ ಸಾಹಿತಿಗಳು, ಬರಹಗಾರರು, ಜನಪರ ಸಂಘಟನೆಗಳಿಗೆ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ, ಕನ್ನಡ ನಾಡಿನ ಸೌಹಾರ್ದತೆ, ಜಾತ್ಯತೀತ ಪರಂಪರೆ ರಕ್ಷಣೆ ವಿಚಾರದಲ್ಲಿ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು. ಕನ್ನಡ ಪರ ಹೋರಾಟಗಾರರು, ರೈತರು, ಕಾರ್ಮಿಕರು, ದಲಿತ ಹೋರಾಟಗಾರರ ಮೇಲೆ ಹಾಗೂ ಬರಹಗಾರರ ವಿರುದ್ಧ ದಾಖಲಾದ ಸುಳ್ಳು ಮೊಕದ್ದಮೆ ಹಿಂಪಡೆಯುತ್ತೇವೆ ಎಂದು ತಿಳಿಸಿದ್ದಾರೆ.
ಪಠ್ಯ, ಪಾಠಗಳ ಮೂಲಕ ಮಕ್ಕಳ ಮನಸ್ಸು ಕಲುಷಿತಗೊಳಿಸುವ ಕೃತ್ಯ ಸಹಿಸುವುದಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.