ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಕಾರಣದಿಂದ ರಾಜ್ಯದಲ್ಲಿ ಆಡಳಿತಯಂತ್ರ ಸ್ಥಗಿತವಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ. ಹೀಗಾಗಿ ತುರ್ತಾಗಿ ಕೆಲಸಗಳನ್ನು ಕೈಗೆತ್ತಿಕೊಳ್ಳಬೇಕು. ಸರ್ಕಾರದ ಎಲ್ಲಾ ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದಂತೆ ಜೂನ್ ಅಂತ್ಯದೊಳಗೆ ಟೆಂಡರ್ ಪ್ರಕ್ರಿಯೆ ನಡೆಸಿ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗುರುವಾರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಮಾರ್ಚ್ ನಿಂದ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಆಡಳಿತ ಯಂತ್ರ ಸ್ಥಗಿತಗೊಂಡಿದೆ. ಎಲ್ಲಾ ಅಧಿಕಾರಿಗಳು ಚುನಾವಣಾ ಕರ್ತವ್ಯದಲ್ಲಿದ್ದರು. ಇದೀಗ ಮನವಿ ಮೇರೆಗೆ ನೀತಿ ಸಂಹಿತೆಯಲ್ಲಿ ಕೆಲವು ಸಡಿಲಿಕೆ ಮಾಡಲಾಗಿದೆ. ತಕ್ಷಣಕ್ಕೆ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.
ಫೆಬ್ರವರಿಯಲ್ಲಿ ಬಜೆಟ್ ಮಂಡನೆಯಾಗಿದ್ದು, ನೀತಿ ಸಂಹಿತೆಯಿಂದ ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗಿವೆ. ಒಂದು ವರ್ಷದಲ್ಲಿ ಮಾಡುವ ಕೆಲಸ 10 ತಿಂಗಳಲ್ಲಿ ಮಾಡಿ ಮುಗಿಸುವ ಅನಿವಾರ್ಯತೆ ಇದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.