alex Certify BIG NEWS : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ |CM Siddaramaiah | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ |CM Siddaramaiah

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಅಬಕಾರಿ ಸುಂಕ ಏರಿಕೆ ಬಗ್ಗೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಬಿಜೆಪಿ ಅವರಿಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಎಲ್ಲಿದೆ? ಡಾ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ಗೆ 113 ಡಾಲರ್ ಇತ್ತು. 2015 ರಲ್ಲಿ ಈ ಬೆಲೆ ಅರ್ಧಕ್ಕರ್ಧ ಕಡಿಮೆಯಾದರೂ, ಬೆಲೆ ಇಳಿಸಿ, ಜನರ ಹೊರೆ ಕಡಿಮೆ ಮಾಡುವ ಕಾಳಜಿಯನ್ನು ಮೋದಿ ಅವರು ತೋರಲಿಲ್ಲ. ಬಿಜೆಪಿಯವರು ಯಾರ ವಿರುದ್ಧ ಹೋರಾಡಬೇಕು? ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಸರ್ಕಾರದಿಂದ ನಿರಂತರ ಅನ್ಯಾಯವಾಗುತ್ತ ಬಂದಿದ್ದರೂ, ಬಿಜೆಪಿಯವರು ದನಿ ಎತ್ತಿಲ್ಲ? ತೆರಿಗೆ ಅನ್ಯಾಯವಾದಾಗ ಸಂಸದರು ಈ ವಿಷಯದ ಕುರಿತು ಮಾತನಾಡಿಲ್ಲ; ರಾಜ್ಯಕ್ಕೆ 15ನೇ ಹಣಕಾಸು ಆಯೋಗವು ವಿಶೇಷ ಅನುದಾನ ನೀಡುವಂತೆ ಶಿಫಾರಸು ಮಾಡಿದ್ದರೂ ಕೇಂದ್ರ ಸರ್ಕಾರ ನೀಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಆಯವ್ಯಯದಲ್ಲಿ ನಿರ್ಮಲಾ ಸೀತಾರಾಮನ್ ಅವರು 5,000 ಕೋಟಿ ರೂ. ಒದಗಿಸುವುದಾಗಿ ಘೋಷಿಸಿದರೂ ಬಿಡಿಗಾಸೂ ನೀಡಿಲ್ಲ. ಈ ವಿಷಯಗಳ ಕುರಿತು ಬಿಜೆಪಿಯವರು ದನಿ ಎತ್ತಿದ್ದಾರೆಯೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ. ಹೀಗಾಗಿ ವಿಪಕ್ಷ ನಾಯಕ ಅಶೋಕ್ ಅವರ ಮಾತುಗಳಿಗೆ ಅರ್ಥವಿಲ್ಲ. ಆರ್.ಅಶೋಕ್ ಗೆ ಇದೆಲ್ಲಾ ಅರ್ಥ ಆಗುವುದೂ ಇಲ್ಲ , ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ಅವರಲ್ಲಿ ಇಲ್ಲ. ಜನರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲ ಕ್ರೋಢೀಕರಣದ ಉದ್ದೇಶದೊಂದಿಗೆ ಪೆಟ್ರೋಲ್, ಡೀಸೆಲ್ ಮಾರಾಟ ತೆರಿಗೆಯಲ್ಲಿ 3 ರೂ. ಗಳಷ್ಟು ಹೆಚ್ಚಿಸಲಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಹೆಚ್ಚಳದಿಂದ ಸಂಗ್ರಹವಾಗುವ ಅಂದಾಜು 3,000 ಕೋಟಿ ರೂಪಾಯಿಗಳು ರಾಜ್ಯದ ಖಜಾನೆಗೆ ಸಂದಾಯವಾಗುತ್ತದೆ, ಆ ಹಣ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗವಾಗುತ್ತದೆ, ಅದು ನಮ್ಮ ಜೇಬಿಗೆ ಹೋಗುವುದಿಲ್ಲ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಂದು ಯೋಜನೆಗಳಲ್ಲಿಯೂ 40% ತೆರಿಗೆ ಹಣ ಬಿಜೆಪಿ ನಾಯಕರ ಜೇಬಿಗೆ ಹೋಗುತ್ತಿತ್ತು. ಈ ರೀತಿ ಅಂದಾಜು ಒಂದುವರೆ ಲಕ್ಷ ಕೋಟಿ ರೂಪಾಯಿಗಳಷ್ಟು ರಾಜ್ಯದ ಜನರ ಬೆವರಗಳಿಕೆಯ ತೆರಿಗೆ ಹಣವನ್ನು ಈ ಬಿಜೆಪಿ ನಾಯಕರು ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದಾರೆ. ಇಂತಹ ಲೂಟಿಕೋರ, ಭ್ರಷ್ಟ, ಜನವಿರೋಧಿ ಬಿಜೆಪಿ ನಾಯಕರಿಗೆ ಜನಕಲ್ಯಾಣಕ್ಕಾಗಿ ಸ್ಪಲ್ಪ ಪ್ರಮಾಣದ ತೆರಿಗೆ ಹೆಚ್ಚಿಸಿದ್ದನ್ನು ಪ್ರಶ್ನಿಸುವ ಯೋಗ್ಯತೆ ಎಲ್ಲಿದೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

 

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...