ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ.
ಮುಡಾ ಹಗರಣ ತನಿಖೆಗೆ ಅರ್ಹ ಎಂದು ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಆದೇಶಿಸಿತ್ತು. ಗುರುವಾರ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆದಿದ್ದು, ಶುಕ್ರವಾರವೇ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಖಾಸಗಿ ದೂರಿನಲ್ಲಿ ಉಲ್ಲೇಖಿಸಿದಂತೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜ್ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ. ತನಿಖೆ ಹಂತದಲ್ಲಿ ಕಂಡು ಬರುವ ಸರ್ಕಾರಿ ಅಧಿಕಾರಿಗಳು ಮತ್ತು ಇತರರ ಹೆಸರನ್ನು ಸೇರಿಸುವ ಅಧಿಕಾರ ತನಿಖಾಧಿಕಾರಿಗಳಿಗೆ ಇರುತ್ತದೆ.
ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್ಪಿ ಉದೇಶ್ ಗುರುವಾರ ಬೆಂಗಳೂರಿಗೆ ಆಗಮಿಸಿ ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರತಿಗಳನ್ನು ಅಧಿಕೃತವಾಗಿ ಪಡೆದುಕೊಂಡು ಲೋಕಾಯುಕ್ತ ಪ್ರಧಾನ ಕಚೇರಿಗೆ ಭೇಟಿ ನೀಡಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ, ಲೋಕಾಯುಕ್ತ ಕಾನೂನು ಸಲಹೆಗಾರರ ಜೊತೆಗೂ ಸಮಲೋಚನೆ ನಡೆಸಿದ್ದು, ಶುಕ್ರವಾರ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.