ಬೆಂಗಳೂರು : ತುಂಗಭದ್ರಾ ಜಲಾಶಯದ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತುಂಗಭದ್ರಾ ಜಲಾಶಯದ ಗೇಟ್ ಮುರಿದಿರುವ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ತುಂಗಭದ್ರಾ ಜಲಾಶಯದ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ. ತುಂಗಭದ್ರಾ ಜಲಾಶಯ ಮತ್ತೆ ತುಂಬುವ ವಿಶ್ವಾಸವಿದ್ದು, ಬಾಗಿನ ಅರ್ಪಿಸಲು ನಾನು ಮತ್ತೊಮ್ಮೆ ಬರುತ್ತೇನೆ. ತುಂಗಭದ್ರಾ ಜಲಾಶಯದ 19ನೇ ಗೇಟ್ ತುಂಡಾಗಿದೆ.
ಜಲಾಶಯದ ಗೇಟ್ ಗಳ ನಿರ್ಮಾಣ ತಜ್ಞ ಹಾಗೂ ಸುರಕ್ಷತೆ ತಜ್ಞ ಎಂಜಿನಿಯರ್ ಕನ್ನಯ್ಯ ನಾಯ್ಡು ಅವರ ಜೊತೆ ಚರ್ಚಿಸಿದ್ದೇನೆ. ಅವರಿಂದ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ. ತುಂಗಭದ್ರಾ ಜಲಾಶಯದ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಜಲಶಾಯ ಮಂಡಳಿಯದಾಗಿದ್ದು, ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು, ಕೇಂದ್ರ ಜಲ ಆಯೋಗ, ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದ ಸದಸ್ಯರು ಮಂಡಳಿಯಲ್ಲಿರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.