ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಮುಖ್ಯಮಂತ್ರಿಗಳು, ಪೊಲೀಸ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕಲ್ಯಾಣ ಕರ್ನಾಟಕದ ಸಮಗ್ರ ಪ್ರಗತಿಗೆ ಸಂವಿಧಾನದ 371 ಜೆ ವಿಧಿ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗುವುದು. ಅಲ್ಲದೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ವಿಶೇಷ ಇಂಜಿನಿಯರಿಂಗ್ ವಿಭಾಗ ಮಂಜೂರು ಮಾಡಲಾಗುವುದು ಎಂದು ಘೋಷಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 26 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಿದ್ದು, ಈ ಸಲ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಶಿಕ್ಷಣ ವರ್ಷ ಎಂದು ಘೋಷಿಸಿ ಫಲಿತಾಂಶ ಹೆಚ್ಚಳಕ್ಕೆ 7 ಜಿಲ್ಲೆಗಳ ಪ್ರಾಥಮಿಕ ಮತ್ತು ಪ್ರೌಢಶಾಲೆ ಗಳಿಗೆ 2619 ಅತಿಥಿ ಶಿಕ್ಷಕರನ್ನು ಅಕ್ಷರ ಮಿತ್ರ ಎಂದು ನೇಮಿಸುತ್ತಿದೆ. ಈ ತಿಂಗಳ ಅಂತ್ಯದೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, 20 ಕೋಟಿ ಅನುದಾನ ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.