ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರು ಹರಿಸುವುದನ್ನು ಮುಂದುವರೆಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ.
ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ಪ್ರಾಧಿಕಾರದ ಆದೇಶದಿಂದ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಒಗ್ಗಟ್ಟಿನ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ದೆಹಲಿಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ರಾಜ್ಯದ ಸಂಸದರು, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆ ನಡೆಯಲಿದೆ.
ಸಂಸತ್ ಅಧಿವೇಶನ ಆರಂಭವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಮೇಲೆ ಒತ್ತಡ ತರಲು ರಾಜ್ಯ ಸರ್ಕಾರ ಬಯಸಿದ್ದು, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರನ್ನು ಸಭೆಗೆ ಆಹ್ವಾನಿಸಲಾಗಿದೆ. ರಾಜ್ಯದ ಲೋಕಸಭೆ ಸದಸ್ಯರು, ರಾಜ್ಯಸಭೆ ಸದಸ್ಯರು ಹಾಗೂ ಸಚಿವರಾದ ಚೆಲುವರಾಯಸ್ವಾಮಿ, ಹೆಚ್.ಕೆ. ಪಾಟೀಲ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರಸಿಂಗ್ ಶೆಖಾವತ್ ಸೇರಿ ಹಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಾಗುವುದು ಎಂದು ಹೇಳಲಾಗಿದೆ.