ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಮಳೆಯಿಂದ ಹಾನಿಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯದಲ್ಲಿ ಮಹತ್ವದ ಸಭೆ ನಡೆಯಲಿದೆ.
ಮಳೆಯಿಂದ ಹಾನಿಗೊಳಗಾದ ಜಿಲ್ಲೆಯ ಜಿಲ್ಲಾಧಿಕಾರಿಗಳು, ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮಳೆ ಹಾನಿ, ಸಮಸ್ಯೆಗಳ ಕುರಿತಾಗಿ ಮಾಹಿತಿ ಪಡೆದು ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸೂಚನೆ ನೀಡಲಿದ್ದಾರೆ.
ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಯಾದ ರೈತರಿಗೆ ಬರುವ 15 ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ.
ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್ ತಿಂಗಳಲ್ಲಿಯೇ ಅತೀ ಹೆಚ್ಚು ಮಳೆಯಾಗಿದ್ದು ಪ್ರಾಥಮಿಕ ಅಂದಾಜು ಬೆಳೆ ನಷ್ಟಕ್ಕಿಂತ ಇನ್ನೂ ಹೆಚ್ಚಿನ ಬೆಳೆ ನಷ್ಟವಾಗಿರುವ ವರದಿ ನಿರೀಕ್ಷಿಸಲಾಗಿದ್ದು, ಮೂರು ದಿನಗಳಲ್ಲಿ ಜಂಟಿ ಸಮೀಕ್ಷೆಯ ನಂತರ ಬೆಳೆ ನಷ್ಟದ ನಿಖರತೆ ತಿಳಿಯಲಿದೆ. ಇದಕ್ಕಾಗಿಯೇ ಶನಿವಾರ ಮುಖ್ಯಮಂತ್ರಿಗಳೊಂದಿಗೆ ಅಧಿಕ ಮಳೆಯಾದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಸೂಚನೆ ನೀಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.