![](https://kannadadunia.com/wp-content/uploads/2025/01/cm-Siddaramaiah-1.png)
ಬೆಂಗಳೂರು: ಮೈಸೂರು ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಕಾವೇರಿ’ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.
ಮೈಸೂರು ಡಿಸಿ, ಪೊಲೀಸ್ ಕಮಿಷನರ್ ಹಾಗೂ ಹಿರಿಯ ಅಧಿಕಾರಿಗಳ ಜೊತೆಗೆ ಸಿಎಂ ಸಭೆ ನಡೆಸಿದ್ದಾರೆ. ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ.
ಕಾನೂನು ಸುವ್ಯವಸ್ಥೆ ಕೈಗೆತ್ತಿಕೊಂಡವರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅಮಾಯಕರಿಗೆ ತೊಂದರೆ ಕೊಡಬಾರದು. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ತರಲು ಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಉದಯಗಿರಿ ಪೋಲಿಸ್ ಠಾಣೆ ಮೇಲೆ ಕಲ್ಲು ತೂರಿದವರು, ಪ್ರಚೋದನೆ ನೀಡಿದವರನ್ನು ಪತ್ತೆ ಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಿ ಎಂದು ಸಭೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.
ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಪ್ರಕರಣ ಇದಾಗಿದ್ದು, ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ರೀತಿಯಲ್ಲಿ ಪೊಲೀಸರು ಮತ್ತು ಪೊಲೀಸ್ ವಾಹನಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಪ್ರಶ್ನೆ ಮಾಡಿದ್ದರು. ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕರು ಆಕ್ರೋಶ ಹೊರಹಾಕಿದ್ದರು. ವಿಪಕ್ಷಗಳ ಆಕ್ರೋಶದ ಬೆನ್ನಲ್ಲೇ ಎಚ್ಚೆತ್ತ ಮುಖ್ಯಮಂತ್ರಿಗಳು ಸಭೆ ನಡೆಸಿದ್ದಾರೆ. ಸುದೀರ್ಘ ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆನ್ನಲಾಗಿದೆ.