ಬೆಂಗಳೂರು: ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಹಾಗೂ ವಿವಿಧ ನೌಕರರ ಸಂಘಟನೆಗಳ ಪದಾಧಿಕಾರಿಗಳ ನಿಯೋಗದಿಂದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಮರು ಜಾರಿಗೆ ಮನವಿ ಮಾಡಲಾಗಿದೆ.
ಇದಕ್ಕೆ ಸ್ಪಂದಿಸಿದ ಸಿಎಂ ನೌಕರರ ನಿಯೋಗದೊಂದಿಗೆ ಮಾತನಾಡಿ, ಹಳೆ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಬಜೆಟ್ ನಲ್ಲಿ ಘೋಷಣೆ ಮಾಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.
ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು, ಅರ್ಹ ಫಲಾನುಭವಿಗಳಿಗೆ ತಲುಪಿಸಲು ನೌಕರರು ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ, 2006 ಏಪ್ರಿಲ್ 1 ರಿಂದ ಎನ್.ಪಿ.ಎಸ್. ಜಾರಿಯಾಗಿದ್ದು, 2.98 ಲಕ್ಷ ನೌಕರರು ಎನ್.ಪಿ.ಎಸ್. ವ್ಯಾಪ್ತಿಗೆ ಒಳಪಡುತ್ತಾರೆ. ಪಿಂಚಣಿ ಮೊತ್ತವನ್ನು ಠೇವಣಿ ಇಡಲಾಗಿದ್ದು, ಈ ಮೊತ್ತ ಬಳಸಿಕೊಂಡು ಇವರು ನಿವೃತ್ತಿಯಾಗುವ ವೇಳೆಗೆ ಲಭ್ಯವಾಗುವಂತೆ ಜಿಪಿಎಫ್ ನಲ್ಲಿ ಇಡಬಹುದು ಎಂದು ತಿಳಿಸಿದ್ದಾರೆ.
ರಾಜಸ್ಥಾನ, ಛತ್ತೀಸ್ಗಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಮರು ಜಾರಿ ಮಾಡಲಾಗಿದ್ದು, ಕರ್ನಾಟಕದಲ್ಲಿಯೂ ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು ಎಂದು ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್ ತೇಜ ಹೇಳಿದ್ದಾರೆ.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಕೆಪಿಟಿಸಿಎಲ್, ಜಲಮಂಡಳಿ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಹಲವು ನೌಕರರ ಸಂಘಗಳ ಪ್ರತಿನಿಧಿಗಳು ನಿಯೋಗದಲ್ಲಿದ್ದರು.