ಬೆಂಗಳೂರು: ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ 81,589 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿ ಬಗ್ಗೆ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ 82 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಇದ್ದು, 70 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಮುಂಗಾರುಪೂರ್ವ ಬಿತ್ತನೆ ಆಗಿರುವ ಉದ್ದು, ಹೆಸರು ಕಟಾವಿಗೆ ಬಂದಿದೆ ಎಂದು ಹೇಳಿದ್ದಾರೆ.
ರಾಜ್ಯದ ಜಲಾಶಯಗಳು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಂಬರುವ ಮಳೆ ಮುನ್ಸೂಚನೆ ಆಧರಿಸಿ ಮುಂಚಿತವಾಗಿಯೇ ಸೂಕ್ತ ಪ್ರಮಾಣದ ನೀರನ್ನು ಜಲಾಶಯಗಳಿಂದ ಹೊರಗೆ ಬಿಡಬೇಕು. ಮಳೆಯಾದ ಸಂದರ್ಭದಲ್ಲಿ ಏಕಾಏಕಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಹೆಚ್ಚಾಗಿ ಪ್ರವಾಹ ಉಂಟಾಗುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ.