ಬೆಂಗಳೂರು: ಬೆಂಗಳೂರಿನಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ಕಾಮಗಾರಿ ಪರಿಶೀಲನೆ ನಡೆಸಿ ಸಂತ್ರಸ್ತರ ಅಹವಾಲು ಆಲಿಸಲಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ರಾಜ ಕಾಲುವೆ ಅಭಿವೃದ್ಧಿ ಕಾಮಗಾರಿ, ಹೂಳು ತೆರವು ಮೊದಲಾದವುಗಳನ್ನು ಸಿಎಂ ಪರಿಶೀಲನೆ ನಡೆಸಲಿದ್ದಾರೆ. ಭಾರಿ ಮಳೆಯಿಂದಾಗಿ ಬಡಾವಣೆ, ಮನೆಗಳಿಗೆ ನೀರು ನುಗ್ಗಿ ಜನ ಸಂಕಷ್ಟಕ್ಕೀಡಾಗಿದ್ದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಪರಿಶೀಲನೆ ನಡೆಸಿ ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಿಂದ ಹೊರಟು ಬೆಂಗಳೂರಿನ ವಿವಿಧೆಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್, ವಿವಿಧ ಇಲಾಖೆಗಳ ಸಚಿವರು, ಶಾಸಕರು, ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಾಥ್ ನೀಡಲಿದ್ದಾರೆ.
ಮೊದಲಿಗೆ ಮೈಸೂರು ರಸ್ತೆಯ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪ ರಾಜಕಾಲುವೆ ಹೂಳು ತೆರವುಗೊಳಿಸುವ ಕಾಮಗಾರಿಯನ್ನು ಸಿಎಂ ಪರಿಶೀಲಿಸಲಿದ್ದಾರೆ. ನಂತರ ನಾಯಂಡಹಳ್ಳಿ ಜಂಕ್ಷನ್ ಬಳಿ ರಾಜಕಾಲುವೆ ಹೂಳು ತೆರವು ಪರಿಶೀಲನೆ, ಜೆಪಿ ನಗರದ ರಾಗಿಗುಡ್ಡ ಜಂಕ್ಷನ್ ವೀಕ್ಷಣೆ, ಅನುಗ್ರಹ ಲೇಔಟ್ ರಾಜಕಾಲುವೆ ಕಾಮಗಾರಿ, ಸಿಲ್ಕ್ ಬೋರ್ಡ್ ಜಂಕ್ಷನ್ ರಾಜಕಾಲುವೆ ಕಾಮಗಾರಿ ಸೇರಿದಂತೆ ವಿವಿಧೆಡೆ ಕಾಮಗಾರಿಗಳ ಪರಿಶೀಲನೆ ನಡೆಸಲಿದ್ದಾರೆ.