ಬೆಂಗಳೂರು ; ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಅಲ್ಲಿ ಹಾಕಲಾಗಿದ್ದ ಬುಲೆಟ್ ಫ್ರೂಫ್ ಗ್ಲಾಸನ್ನು ಸಿಎಂ ತೆಗೆಸಿದ್ದಾರೆ. ಜನರನ್ನುದ್ದೇಶಿಸಿ ಸಿಎಂ ಮಾತನಾಡುತ್ತಿರುವ ಸಂದರ್ಭದಲ್ಲಿ ಬುಲೆಟ್ ಫ್ರೂಫ್ ಗ್ಲಾಸ್ ಗಮನಿಸಿದ ಸಿಎಂ ಅದನ್ನು ತೆಗೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಂತರ ಗ್ಲಾಸ್ ರಿಮೂವ್ ಮಾಡಲಾಯಿತು.
ಸಿಎಂ ಸಿದ್ದರಾಮಯ್ಯ ಧ್ವಜಾರೋಹಣದ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ್ದು, ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದು, ಜನರಿಗೆ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದೇಶದ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ರಾಜ್ಯ ಸರ್ಕಾರ ಬಡತನ ನಿರ್ಮೂಲನೆ ಕೆಲಸ ಮಾಡುತ್ತಿದೆ. ನಾವು ಈಗಾಗಲೇ ನೀಡಿರುವ ಆಶ್ವಾಸನೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಲಿದೆ. ಆಗಸ್ಟ್ 27 ರಂದು ಗೃಹಲಕ್ಷ್ಮೀ ಯೋಜನೆ ಹಣ ಮಹಿಳೆಯರ ಖಾತೆಗೆ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ.
ಹಸಿವು ಮುಕ್ತ ಕರ್ನಾಟಕ ಮಾಡಲು ಅನ್ನಭಾಗ್ಯ ಯೋಜನೆ ಜಾರಿ ಮಾಡಲಾಗಿದ್ದು, 5 ಕೆಜಿ ಅಕ್ಕಿ ಜೊತೆಗೆ 5 ಕೆಜಿ ಅಕ್ಕಿ ಬದಲು ಹಣ ನೀಡಲಾಗುತ್ತಿದೆ. ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಎಂದರು.
ಗೃಹಜ್ಯೋತಿ ಯೋಜನೆ ಜುಲೈ 1 ರಿಂದ ಜಾರಿಗೆ ಬಂದಿದ್ದು, ಆಗಸ್ಟ್ 1 ರ ಬಿಲ್ನಿಂದ ಗ್ರಾಹಕರಿಗೆ ಸೌಲಭ್ಯ ದೊರೆಯುತ್ತಿದೆ. ಸುಮಾರು 2 ಕೋಟಿ ಗ್ರಾಹಕರಿಗೆ ಈ ಯೋಜನೆಯಿಂದ ಅನುಕೂಲವಾಗಲಿದ್ದು, ಇದುವರೆಗೆ 1.49 ಕೋಟಿ ಗ್ರಾಹಕರು ನೋಂದಾಯಿಸಿಕೊಂಡಿದ್ದು, ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಬಾಡಿಗೆದಾರರಿಗೂ ಈ ಸೌಲಭ್ಯ ವಿಸ್ತರಿಸಲಾಗಿದೆ. ಇದಕ್ಕಾಗಿ ವಾರ್ಷಿಕವಾಗಿ 13,910 ಕೋಟಿ ರೂ.ಗಳಷ್ಟು ವಿನಿಯೋಗಿಸಲಾಗುತ್ತಿದೆ ಎಂದರು.
ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ ನಮ್ಮ ಸರ್ಕಾರವು ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು, ಯೋಜನೆಯಡಿ ಪ್ರತಿ ಫಲಾನುಭವಿಗೆ ಕೇಂದ್ರವು ನೀಡುವ 5 ಕೆಜಿ ಅಕ್ಕಿಯೊಂದಿಗೆ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯ ನೀಡಲು ಕ್ರಮ ತೆಗೆದುಕೊಳ್ಳುತ್ತಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ನಗದು ವರ್ಗಾಯಿಸಲು ನಿರ್ಧರಿಸಿದ್ದು, ಈ ವರೆಗೆ 1.04 ಕೋಟಿ ಕುಟುಂಬಗಳು ನಗದು ಸೌಲಭ್ಯ ಪಡೆಯುತ್ತಿವೆ. ಉಳಿದ ಕುಟುಂಬಗಳಿಗೆ ಸದ್ಯದಲ್ಲಿಯೇ ಹಣ ವರ್ಗಾಯಿಸಲು ಕ್ರಮ ಕೈಗೊಳ್ಳಲಿದ್ದೇವೆ ಎಂದರು.