ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾಗಿದ್ದು, ನೀತಿ ಸಂಹಿತೆ ಕಾರಣದಿಂದ ಕಳೆದ ತಿಂಗಳೇ ನಡೆಸಬೇಕಿದ್ದ ಸಂಭ್ರಮಾಚರಣೆ ನಡೆಸಿರಲಿಲ್ಲ. ಹೀಗಿರುವಾಗಲೇ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.
ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ನಾಗೇಂದ್ರ ಸಿಎಂ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಖಾಸಗಿ ವಾಹನದಲ್ಲಿ ಆಗಮಿಸಿದ ಅವರು ರಾಜೀನಾಮೆ ಸಲ್ಲಿಸಿದ್ದು, ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಒಂದು ಸಾಲಿನ ಪತ್ರವನ್ನು ನೀಡಿದ್ದು, ಅದನ್ನು ಸಿಎಂ ಸ್ವೀಕರಿಸಿದ್ದಾರೆ. ಇದರೊಂದಿಗೆ ವರ್ಷಾಚರಣೆ ಹೊತ್ತಲ್ಲೇ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ.