ಬೆಂಗಳೂರು: ರಾಜ್ಯದಲ್ಲಿ ಭೂಸ್ವಾಧೀನದ ಎಲ್ಲಾ ಪ್ರಕರಣಗಳಲ್ಲಿ ನಿಗದಿತ ಪರಿಹಾರ ಮೊತ್ತ ಹೆಚ್ಚಳ ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ,
ಮೈಸೂರು ಹೊರವಲಯದ ಕೆಸರೆ ಗ್ರಾಮದಲ್ಲಿ 3.16 ಎಕರೆ ಜಮೀನಿನ ಬೆಲೆ 62 ಕೋಟಿ ರೂ.ಗಳೆಂದು ಮುಖ್ಯಮಂತ್ರಿಗಳ ಹೇಳಿಕೆಯಿಂದಲೇ ತಿಳಿದು ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಹೆಬ್ಬಾಳ ಮತ್ತು ಹೆಬ್ಬಾಳ ಅಮಾನಿಕೆರೆ ಗ್ರಾಮದಲ್ಲಿ ಸ್ವಾಧೀನ ಪಡಿಸಿಕೊಂಡ ಪ್ರತಿ ಎಕರೆ ಭೂಮಿಗೆ 12.12 ಕೋಟಿ ರೂ. ನಿಗದಿಪಡಿಸಲಾಗಿದೆ. ಇದು ಮಾರುಕಟ್ಟೆ ದರಕ್ಕಿಂತ ತುಂಬಾ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.
ಬಿಡಿಎ, ನೀರಾವರಿ, ಮೆಟ್ರೋ, ಹೆದ್ದಾರಿ ಹೀಗೆ ಎಲ್ಲಾ ರೀತಿಯ ಭೂ ಸ್ವಾಧೀನ ಪ್ರಕರಣಗಳಲ್ಲಿ ಪರಿಹಾರ ನಿಗದಿಪಡಿಸುವಾಗ ಕೆಸರೆ ಗ್ರಾಮದ ಮಾನದಂಡ ಇರಿಸಿಕೊಳ್ಳಬೇಕು. ಮುಖ್ಯಮಂತ್ರಿಗೆ ಅನ್ವಯಿಸುವ ದರ ಶ್ರೀಸಾಮಾನ್ಯ ಅನ್ವಯಿಸಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಈ ರೀತಿ ಮಾಡುವುದನ್ನು ಸಾಮಾಜಿಕ ನ್ಯಾಯವೆನ್ನುತ್ತಾರೆ. ಸಚಿವ ಸಂಪುಟದ ಎಲ್ಲಾ ಸದಸ್ಯರಿಗೂ ಈ ಕುರಿತು ಸೂಚನೆ ನೀಡುವಂತೆ ಸುರೇಶ್ ಕುಮಾರ್ ತಿಳಿಸಿದ್ದಾರೆ.