ಬೆಂಗಳೂರು : ಅಕ್ಟೋಬರ್ 15 ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ ‘CWMA’ ಮತ್ತೆ ಆದೇಶ ಹೊರಡಿಸಿದ್ದು, ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ.
‘CWMA’ ಆದೇಶದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕಾನೂನು ತಜ್ಞರ ಮೊರೆ ಹೋಗಿದ್ದು, ಕೆಲವೇ ಕ್ಷಣಗಳಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಜೊತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮುಂದೆ ತೆಗೆದುಕೊಳ್ಳಬಹುದಾದ ನಿರ್ಧಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಹೊರ ಬೀಳುತ್ತಿದ್ದಂತೆ ರಾಜ್ಯದಲ್ಲಿ ಪ್ರತಿಭಟನೆಗಳು ಮತ್ತಷ್ಟು ಜೋರಾಗಿದೆ. ಮತ್ತೆ ಮಂಡ್ಯದಲ್ಲಿ ರೈತಪರ ಸಂಘಟನೆಗಳು ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿವೆ. ಕಾವೇರಿ ಕಿಚ್ಚಿನ ನಡುವೆಯೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆಯಾಗಿದೆ.