ಹಾನಗಲ್ ಮತ್ತು ಸಿಂದಗಿ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ರಮೇಶ ಭೂಸನೂರ, ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಶಿವರಾಜ ಸಜ್ಜನರ ಅವರನ್ನು ಆಯ್ಕೆ ಮಾಡಲಾಗಿದೆ.
ಉದಾಸಿ ಕುಟುಂಬಕ್ಕೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಸಿಎಂ ಉದಾಸಿ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರದಲ್ಲಿ ಉದಾಸಿ ಕುಟುಂಬದವರಿಗೆ ಟಿಕೆಟ್ ನೀಡುವ ನಿರೀಕ್ಷೆ ಇತ್ತು. ಸಂಸದ ಶಿವಕುಮಾರ ಉದಾಸಿ ಇಲ್ಲವೇ ಅವರ ಪತ್ನಿಗೆ ಟಿಕೆಟ್ ನೀಡಲಾಗುವುದು ಎಂದು ಹೇಳಲಾಗಿತ್ತು.
ಆದರೆ, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕುಟುಂಬ ರಾಜಕಾರಣದ ಕುರಿತಾಗಿ ಚರ್ಚೆಯಾಗಿದ್ದು, ಶಿವಕುಮಾರ ಉದಾಸಿ ಅವರಿಗೆ ಟಿಕೆಟ್ ನೀಡಲು ವಿರೋಧ ವ್ಯಕ್ತವಾಗಿದ್ದರಿಂದ ಬದಲಾವಣೆಗೆ ಉಪ ಸಮರವೇ ಸೂಕ್ತವೆಂದು ನಿರ್ಧರಿಸಿದ ವರಿಷ್ಠರು ಉದಾಸಿ ಕುಟುಂಬದ ಬದಲಿಗೆ ಶಿವರಾಜ ಸಜ್ಜನರ ಅವರನ್ನು ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ.
ಉಪಚುನಾವಣೆಯಲ್ಲಿ ಗೆಲುವಿಗೆ ಸಚಿವರ ದಂಡೇ ಇರುತ್ತದೆ. ಹೊಸ ವ್ಯಕ್ತಿಗಳನ್ನು ಬೆಳೆಸಲು ಅವಕಾಶ ಸಿಕ್ಕಂತಾಗುತ್ತದೆ. ಕುಟುಂಬದಿಂದ ಕ್ಷೇತ್ರವನ್ನು ಮುಕ್ತಿಗೊಳಿಸಬಹುದು. ಅಲ್ಲದೆ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಮನ್ನಣೆ ನೀಡಿದಂತಾಗುತ್ತದೆ ಎಂಬ ಕಾರಣಕ್ಕೆ ಉದಾಸಿ ಕುಟುಂಬಕ್ಕೆ ಟಿಕೆಟ್ ನೀಡಿಲ್ಲ ಎನ್ನಲಾಗಿದೆ.
ಹಿಂದೆ ಸುರೇಶ್ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಪತ್ನಿಗೆ ಟಿಕೆಟ್ ನೀಡಲಾಯಿತು. ಅವರು ಪ್ರಯಾಸದ ಗೆಲುವು ಸಾಧಿಸಿದರು. ಪಕ್ಷಕ್ಕೆ ಹಿನ್ನಡೆಯಾದರೂ ಪಕ್ಷದ ಕಾರ್ಯಕರ್ತರಲ್ಲಿ ವಿಶ್ವಾಸ ತುಂಬುವ ಉದ್ದೇಶದಿಂದ ಉಪ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಬದಲಾವಣೆ ಮಾಡಬೇಕೆಂದು ಬಿಜೆಪಿ ವರಿಷ್ಠರು ಗಂಭೀರ ಚಿಂತನೆ ನಡೆಸಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಉಪಚುನಾವಣೆಯಲ್ಲಿ ಯಾರೇ ಅಭ್ಯರ್ಥಿಗಳಾದರೂ ಹೊಸ ಪ್ರಯೋಗಕ್ಕೆ ಅವಕಾಶ ಇರುವುದರಿಂದ ಕುಟುಂಬ ರಾಜಕಾರಣಕ್ಕೆ ಮಣೆ ಹಾಕುವುದನ್ನು ಬಿಟ್ಟು ಬೇರೆಯವರಿಗೆ ಅವಕಾಶ ನೀಡಬೇಕೆಂಬ ಉದ್ದೇಶದಿಂದ ಮತ್ತು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಘಟಾನುಘಟಿ ಆಡಳಿತ ಪಕ್ಷದ ಘಟಾನುಘಟಿ ನಾಯಕರು, ಸಚಿವರೇ ಇರುವುದರಿಂದ ಮಹತ್ವದ ಬದಲಾವಣೆ ಮಾಡಲಾಗಿದೆ.