ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಭೇಟಿ ಫಲಪ್ರದವಾಗಿದೆ. ಸಚಿವ ಸಂಪುಟ ವಿಸ್ತರಣೆಗೆ ಪಕ್ಷ ಬಿಜೆಪಿ ವರಿಷ್ಠರು ಸಮ್ಮತಿ ಸೂಚಿಸಿದ್ದಾರೆ.
ಪೂರ್ಣಾವಧಿಗೆ ನೀವೇ ಮುಖ್ಯಮಂತ್ರಿಯಾಗಿ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅಭಯ ನೀಡಿದ್ದಾರೆ. ಅಲ್ಲದೆ, ನಾಯಕತ್ವ ಬದಲಾವಣೆ ಬಗ್ಗೆ ಕೇಳಿಬರುತ್ತಿರುವ ಮಾತುಗಳ ಬಗ್ಗೆಯೂ ನಾಯಕರು ಚರ್ಚೆ ನಡೆಸಿದ್ದು, ನೀವು ಒತ್ತಡ ಮಾಡಿಕೊಳ್ಳದೆ ಆರಾಮಾಗಿ ಆಡಳಿತ ನಡೆಸಿ, ಸರ್ಕಾರ ಮತ್ತು ಪಕ್ಷಕ್ಕೆ ಒಳ್ಳೆಯ ಹೆಸರು ತನ್ನಿ ಎಂದು ಸಿಎಂಗೆ ಅಮಿತ್ ಶಾ ಸೂಚಿಸಿದ್ದಾರೆ ಎನ್ನಲಾಗಿದೆ.
ಜನವರಿ 13 ರಂದು ನೂತನ ಸಚಿವರ ಪ್ರಮಾಣವಚನಕ್ಕೆ ಮುಹೂರ್ತ ನಿಗದಿಯಾಗಿದ್ದು, 7 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಯಡಿಯೂರಪ್ಪ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿದ್ದ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡ ಜೊತೆಗಿದ್ದರು. ಈ ನಾಲ್ವರು ನಾಯಕರು ಬಹು ಹೊತ್ತಿನವರೆಗೆ ಸುದೀರ್ಘ ಸಮಾಲೋಚನೆ ನಡೆಸಿದ್ದು ಅಮಿತ್ ಶಾ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಯಡಿಯೂರಪ್ಪ ಅವರಿಗೆ ಉತ್ತಮವಾಗಿ ಆಡಳಿತ ನಡೆಸಿ ಎಂದು ಸಲಹೆ ನೀಡಿದ್ದಾರೆ.