ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಶಾಸಕರ ಅಹವಾಲು ಆಲಿಸಲು ನಡೆಸಿದ ಸಭೆಯಲ್ಲಿ ಸಚಿವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮೊದಲಾದವರು ಪಕ್ಷದ ಶಾಸಕರ ಜೊತೆಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಶಾಸಕರು ಕ್ಷೇತ್ರ ಅಭಿವೃದ್ಧಿ ಅನುದಾನ ಬೇಡಿಕೆ ಇಟ್ಟಿದ್ದು, ಕೆಲವು ಸಚಿವರ ನಡೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವರು ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದು, ತಮ್ಮನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಸಚಿವರು, ಉಸ್ತುವಾರಿ ಸಚಿವರು, ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಶಾಸಕರು ದೂರು ನೀಡಿದ್ದಾರೆ. ಮಧ್ಯಕರ್ನಾಟಕ, ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ ಹಾಗೂ ಕರಾವಳಿ ಭಾಗದ ಶಾಸಕರೊಂದಿಗೆ ನಿನ್ನೆ ನಡೆದ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಹೇಳಲಾಗಿದೆ. ಮೈಸೂರು ಭಾಗದ ಶಾಸಕರೊಂದಿಗೆ ಇಂದು ಸಭೆ ಮುಂದುವರೆಯಲಿದೆ. ಶಾಸಕರ ಅಹವಾಲು ಆಲಿಸಿದ ಸಿಎಂ ಹಾಗೂ ರಾಜ್ಯಾಧ್ಯಕ್ಷರು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.