ಸಂಪುಟ ವಿಸ್ತರಣೆಗೆ ವರಿಷ್ಠರು ಎರಡು, ಮೂರು ದಿನದಲ್ಲಿ ಒಪ್ಪಿಗೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದರಾದರೂ ವರಿಷ್ಠರು ಹಸಿರು ನಿಶಾನೆ ತೋರಲಿಲ್ಲ. ಹೀಗಾಗಿ ಸಿಎಂ ಧಿಡೀರ್ ನಿಗಮ-ಮಂಡಳಿ ಅಧ್ಯಕ್ಷರ ನೇಮಕಾತಿ ಮಾಡಿದ್ದಾರೆ.
ಇನ್ನು ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಒಳಗೊಳಗೆ ಚರ್ಚೆ ನಡೆಯುತ್ತಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ದೆಹಲಿ ಕಚೇರಿ ಉದ್ಘಾಟನೆ ನೆಪದಲ್ಲಿ ರಾಜ್ಯದ ಪ್ರಮುಖ ನಾಯಕರು ದೆಹಲಿಗೆ ತೆರಳಿದ್ದಾರೆ.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಅಲ್ಲದೆ, ಒಂದೂವರೆ ವರ್ಷದಿಂದ ನಡೆಯದ ಸಂಸದರ ಸಭೆಯನ್ನು ಕೂಡ ಕರೆದಿದ್ದಾರೆ. ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದಿರುವ ಯಡಿಯೂರಪ್ಪ ಬಿಕ್ಕಟ್ಟು ಶಮನಕ್ಕೆ ಮುಂದಾಗಿದ್ದು, ಆಪ್ತ ಸಚಿವರು, ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಇದರ ಬೆನ್ನಲ್ಲೇ ಬ್ರಹ್ಮಾಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದು, ವೀರಶೈವ ಲಿಂಗಾಯತ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿ ಒಬಿಸಿಗೆ ಸೇರಿಸಲು ಶಿಫಾರಸು ಮಾಡುವ ಸಾಧ್ಯತೆ ಇದೆ. ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದ್ದು, ಯಡಿಯೂರಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಲಿದ್ದಾರೆ. ಈಗಾಗಲೇ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ ಘೋಷಣೆ ಮಾಡಿದ್ದು, ವೋಟ್ ಬ್ಯಾಂಕ್ ಭದ್ರಪಡಿಸಿಕೊಳ್ಳಲು ಬ್ರಹ್ಮಾಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಬಿಜೆಪಿ ವರಿಷ್ಠರು ಗ್ರೀನ್ ಸಿಗ್ನಲ್ ನೀಡದಿದ್ದರೂ, ಇಂತಹ ಸಮಯದಲ್ಲೇ ನಿಗಮ-ಮಂಡಳಿ ಅಧ್ಯಕ್ಷರ ನೇಮಕ ಮಾಡಿದ್ದಾರೆ. ಸಂಪುಟ ವಿಸ್ತರಣೆ ಅನಿಶ್ಚಿತತೆ, ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ವಲಯದಲ್ಲಿ ಚರ್ಚೆ ನಡೆದಿದ್ದು, ಈ ಬೆಳವಣಿಗೆಗಳನ್ನು ಗಮನಿಸಿರುವ ಸಿಎಂ ಬಲವಾದ ರಾಜಕೀಯ ದಾಳ ಉರುಳಿಸಲಿದ್ದಾರೆ ಎನ್ನಲಾಗಿದೆ.