ತಮ್ಮ ಇಲಾಖೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದೂರು ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ ಎನ್ನುವ ವದಂತಿ ಹರಡಿದೆ.
ಈಶ್ವರಪ್ಪ ಅವರ ವಿರುದ್ಧ ಹಿರಿಯ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹೈಕಮಾಂಡ್ ಕೂಡ ಅಸಮಾಧಾನ ವ್ಯಕ್ತಪಡಿಸಿದೆ ಎನ್ನಲಾಗಿದೆ. ಹಿರಿಯ ಸಚಿವರಾಗಿರುವ ಕೆ.ಎಸ್. ಈಶ್ವರಪ್ಪ ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪವಾಗುತ್ತಿರುವ ಬಗ್ಗೆ ಸಿಎಂ ಜೊತೆಗೆ ಮಾತನಾಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕಿತ್ತು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಸಿಎಂಗೆ ಪರಮಾಧಿಕಾರವಿದೆ. ಸಿಎಂ ಇಚ್ಛಿಸಿದರೆ ಮಾತ್ರ ಸಚಿವ ಸ್ಥಾನ ಉಳಿದೀತು ಎನ್ನುವ ಅಭಿಪ್ರಾಯ ವ್ಯಕ್ತವಾಗಿದ್ದು, ಇವೆಲ್ಲ ಬೆಳವಣಿಗೆಗಳ ನಂತರ ಸಚಿವ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ ಎನ್ನುವ ವದಂತಿ ಹರಡಿದೆ. ಈಶ್ವರಪ್ಪ ರಾಜೀನಾಮೆ ನೀಡುವ ಸುಳಿವು ಅರಿತ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸದ್ಯಕ್ಕೆ ಉಪಚುನಾವಣೆ ಮೇಲೆ ಗಮನ ಹರಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಸಿಎಂ ಯಡಿಯೂರಪ್ಪ ಕೂಡ ತಮ್ಮ ಸಹೋದ್ಯೋಗಿಗಳ ಬಳಿ ಈಶ್ವರಪ್ಪ ದೂರು ನೀಡಿದ ಬಗ್ಗೆ ಚರ್ಚೆ ನಡೆಸಿದ್ದಾರೆ. ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಸಿಎಂ ಆಪ್ತರು ಒತ್ತಾಯಿಸಿದ್ದು, ಇದಕ್ಕೆ ಅವಕಾಶ ನೀಡದೆ ಉಪಚುನಾವಣೆಯ ಬಗ್ಗೆ ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗಿದೆ.