alex Certify ರೈತ ಸಮುದಾಯಕ್ಕೆ ಸಿಎಂ ಯಡಿಯೂರಪ್ಪ ಮತ್ತೊಂದು ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಸಿಎಂ ಯಡಿಯೂರಪ್ಪ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ರೈತರ ಆದಾಯ ದ್ವಿಗುಣಗೊಳಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯ ಹಮ್ಮಿಕೊಂಡಿರುವ ತೋಟಗಾರಿಕಾ ಮೇಳವನ್ನು ಆನ್ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಿ.ಎಫ್.ಟಿ.ಆರ್.ಐ. ಹಾಗೂ ಭಾರತೀಯ ತೋಟಗಾರಿಕಾ ಸಂಸ್ಥೆಯ ಸಹಭಾಗಿತ್ವದೊಂದಿಗೆ ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ, ದಾಸ್ತಾನು ಮತ್ತು ಪ್ಯಾಕೇಜಿಂಗ್ ಗಳ ಬಗ್ಗೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ. ಪ್ರಧಾನಿ ಮೋದಿ 100 ನೇ ಕಿಸಾನ್ ರೈಲಿಗೆ ಇತ್ತೀಚೆಗಷ್ಟೇ ಚಾಲನೆ ನೀಡಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ ಕಿಸಾನ್ ರೈಲುಗಳ ಮೂಲಕ 27 ಸಾವಿರ ಟನ್ ಕೃಷಿ ಉತ್ಪನ್ನಗಳನ್ನು ಸಾಗಿಸಲಾಗಿದೆ. ಬೇಗನೆ ಹಾಳಾಗಬಹುದಾದ ದಾಳಿಂಬೆ, ಕಿತ್ತಳೆ ಹಾಗೂ ಇತರ ತೋಟಗಾರಿಕಾ ಬೆಳೆಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ಕಿಸಾನ್ ರೈಲ್ ಸೌಲಭ್ಯ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ತೋಟಗಾರಿಕಾ ಕ್ಷೇತ್ರದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ರಾಜ್ಯವು ತನ್ನ ಸ್ಥಾನವನ್ನು ಕಾಯ್ದುಕೊಂಡು ಇನ್ನೂ ಹೆಚ್ಚಿನ ಸಾಧನೆ ಮಾಡಲು ಪೂರಕ ಸಂಶೋಧನೆ, ವಿಸ್ತರಣೆ ಹಾಗೂ ಇತರ ಮೂಲಕಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು  ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಮಾತನಾಡಿ, ತೋಟಗಾರಿಕಾ ಪ್ರದೇಶ ವಿಸ್ತರಣೆಯಾಗುತ್ತಿರುವುದು ರೈತರಿಗೆ ತೋಟಗಾರಿಕೆ ಲಾಭದಾಯಕ ಎಂಬುದಕ್ಕೆ ನಿದರ್ಶನ. ವಿಜ್ಞಾನಿಗಳು ರೈತರಿಗೆ ಇನ್ನೂ ಹೆಚ್ಚು ಹೆಚ್ಚು ಲಾಭ ತರುವ ತಳಿಗಳನ್ನು ಸಂಶೋಧಿಸಿ, ರೈತರ ಬದುಕು ಹಸನುಗೊಳಿಸಬೇಕು ಎಂದು ಸಲಹೆ ನೀಡಿದ್ದಾರೆ.

ತೋಟಗಾರಿಕಾ ಸಚಿವ ನಾರಾಯಣಗೌಡ ಮಾತನಾಡಿ, ರಾಜ್ಯದಲ್ಲಿ ತೋಟಗಾರಿಕೆ ಉತ್ತೇಜನಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ತೋಟಗಾರಿಕೆ ಉತ್ಪನ್ನಗಳ ರಫ್ತು ಪ್ರಮಾಣ ಶೇ. 2.5 ರಿಂದ ಶೇ. 5 ಕ್ಕೇರಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ಹೆಚ್ಚಿಸಲು ರೈತರಿಗೆ ಅಗತ್ಯ ಬೆಂಬಲ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ತೋಟಗಾರಿಕಾ ವಿವಿಯ ಕುಲಪತಿ ಡಾ. ಇಂದ್ರೇಶ್ ಮೊದಲಾದವರು ಇದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...