ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇಂದಿನಿಂದ ಪದವಿ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ.
ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಅರ್ಜಿ ನಮೂನೆ ಹಾಗೂ ಕೋರ್ಸ್ ಹೊಂದಿರುವ ಕೈಪಿಡಿಗಳನ್ನು ನೀಡಲಾಗುತ್ತದೆ. ಇದಕ್ಕಾಗಿ ಕಾಲೇಜುಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಅವರ ಸೂಚನೆ ಹಿನ್ನೆಲೆಯಲ್ಲಿ 2022 -23 ನೇ ಸಾಲಿನಿಂದ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಗೆ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ತಂತ್ರಾಂಶದ ಮೂಲಕ ಪ್ರವೇಶ ಪ್ರಕ್ರಿಯೆ ಕೈಗೊಳ್ಳಲು ಕಾಲೇಜು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಕಾಲೇಜುಗಳಲ್ಲಿ ಲಭ್ಯವಿರುವ ಕೋರ್ಸುಗಳು, ಸಂಯೋಜನೆ, ಶುಲ್ಕದ ವಿವರ, ವಿದ್ಯಾರ್ಥಿಗಳಿಗೆ ದೊರೆಯುವ ಸೌಲಭ್ಯಗಳು ಮತ್ತು ವೆಬ್ಸೈಟ್ ಮಾಹಿತಿಯನ್ನು ಸೂಚನಾ ಫಲಕಗಳಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು. ಸಹಾಯವಾಣಿ ಸ್ಥಾಪಿಸಬೇಕು. ಪ್ರವೇಶಾತಿ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಲಾಗಿದೆ.