ಬೆಂಗಳೂರು: ರಾಜ್ಯದಲ್ಲಿ ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಚರ್ಚೆಯ ಬಳಿಕ ರಾಜ್ಯದಲ್ಲಿ ಕಾಲೇಜುಗಳನ್ನು ಆರಂಭಿಸಲು ಚರ್ಚೆ ನಡೆದು, ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು.
ಉಪ ಮುಖ್ಯಮಂತ್ರಿ, ಅಶ್ವತ್ಥನಾರಾಯಣ ಸಭೆ ಬಳಿಕ ಮಾತನಾಡಿ, ಈಗಾಗಲೇ ಶೇ.75 ರಷ್ಟು ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳ ತೆಗೆದುಕೊಂಡರೆ ಶೇ.65 ರಷ್ಟು ವಿದ್ಯಾರ್ಥಿಗಳು ವ್ಯಾಕ್ಸಿನ್ ಪಡೆದಿದ್ದಾರೆ. ಉಳಿದ ವಿದ್ಯಾರ್ಥಿಗಳಿಗೆ ಶೀಘ್ರವೇ ನೀಡಲಾಗುವುದು. ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಲಸಿಕೀಕರಣ ಭರದಿಂದ ಸಾಗುತ್ತಿದೆ ಎಂದರು.
ಆಫ್‌ಲೈನ್ ಕ್ಲಾಸ್ ಕಡ್ಡಾಯ ಅಲ್ಲ. ಇಷ್ಟ ಇದ್ದವರು ಲಸಿಕೆ ಪಡೆದು ಬರಬಹುದು, ಇಲ್ಲದವರು ಆನ್‌ಲೈನ್ ಕ್ಲಾಸ್‌ನಲ್ಲಿ ಪಾಠ ಕೇಳಬಹುದು. ಆದರೆ, ಹಾಜರಿ ಮಾತ್ರ ಕಡ್ಡಾಯ. ಮೇ ತಿಂಗಳಿಂದಲೇ ಆನ್‌ಲೈನ್ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಜತೆಗೆ, ಸಂಪರ್ಕ ತರಗತಿಗಳೂ ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.